ಸಾರಾಂಶ
ಬೆಂಗಳೂರು : ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಲ್ಲಿ ಅಧಿಸೂಚನೆ ಪ್ರಕಟಗೊಳ್ಳುತ್ತಿದ್ದಂತೆ ಉಮೇದುವಾರಿಕೆ ಭರಾಟೆ ಜೋರಾಗಿದ್ದು, ಮೊದಲ ದಿನವೇ ಘಟಾನುಘಟಿಗಳು ಸೇರಿ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿವೆ.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಮನಿ, ಡಾ.ಉಮೇಶ್ ಜಾಧವ್, ಬಿ.ಶ್ರೀರಾಮುಲು, ತುಕಾರಾಂ ಸೇರಿದಂತೆ 41 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು.ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ರಜಾ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ.
ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಗಳು ತಮ್ಮ ಪಕ್ಷಗಳ ಮುಖಂಡರ ಜತೆ ರ್‍ಯಾಲಿಗಳ ಮೂಲಕ ಬಂದು ಉಮೇದುವಾರಿಕೆ ಸಲ್ಲಿಸಿದರು. ಹಲವೆಡೆ ಬೃಹತ್ ಸಮಾವೇಶದ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಲಾಯಿತು. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ, ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ, ಕಲಬುರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಮನಿ, ಬಿಜೆಪಿ ಅಭ್ಯರ್ಥಿಯಾಗಿ ಡಾ.ಉಮೇಶ್ ಜಾಧವ್, ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಬಿಜೆಪಿಯಿಂದ ಡಾ.ಬಸವರಾಜ, ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಾ.ಪ್ರಭಾ ಮಲ್ಲಿಕಾರ್ಜುನ್, ಬಳ್ಳಾರಿಯಲ್ಲಿ ಬಿಜೆಪಿಯಿಂದ ಶ್ರೀರಾಮುಲು, ಕಾಂಗ್ರೆಸ್‌ನಿಂದ ತುಕಾರಾಂ ಸೇರಿದಂತೆ ಇತರರು ತಮ್ಮ ಉಮೇದುವಾರಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಯ ಮೊದಲ ದಿನದಂದು ಉಮೇದುವಾರಿಕೆ ಸಲ್ಲಿಕೆ ಮಾಡಿದ 41 ಅಭ್ಯರ್ಥಿಗಳ ಪೈಕಿ 37 ಪುರುಷರು ಮತ್ತು 4 ಮಹಿಳೆಯರಾಗಿದ್ದಾರೆ. ಅಂತೆಯೇ ಸಲ್ಲಿಕೆಯಾದ 57 ನಾಮಪತ್ರಗಳ ಪೈಕಿ 51 ಪುರುಷರು, 6 ಮಹಿಳೆಯರದ್ದಾಗಿದೆ. ಬಿಜೆಪಿಯಿಂದ 9, ಕಾಂಗ್ರೆಸ್‌ನಿಂದ 11, ಬಿಎಸ್‌ಪಿಯಿಂದ 2, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ 20, ಪಕ್ಷೇತರರು 14 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ, ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಅಧಿಸೂಚನೆ ಪ್ರಕಟವಾಗಿದ್ದು, ಮೊದಲ ದಿನದಂದು ಬಿಜೆಪಿಯಿಂದ ಒಬ್ಬ ನಾಮಪತ್ರ ಸಲ್ಲಿಕೆಯಾಗಿದೆ. ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಗೆ ಇದೇ ತಿಂಗಳ 19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ.