ಸಾರಾಂಶ
ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸ್ಯಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ರೈತರು ಕೃಷಿಯ ಜೊತೆಯಲ್ಲಿ ಆರ್ಥಿಕವಾಗಿ ಸಬಲರಾಗಲು ಹೈನುಗಾರಿಕೆ, ಕೋಳಿ ಹಾಗೂ ಮೀನು ಸಾಕಾಣಿಕೆಗೂ ಕೂಡ ಮಹತ್ವ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು. ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸ್ಯಮೇಳ ಉದ್ಘಾಟಿಸಿ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಶೇ.70 ರಷ್ಟು ಜನ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ರೈತರ ಬೆಳೆಗಳಿಗೆ ವೈಜ್ಞಾನಿಕೆ ಬೆಲೆ ಬರಬೇಕು. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಾಕಷ್ಟು ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಕೃಷಿ ಜೊತೆ ಸಹ ಉತ್ಪಾದನೆಗಳಾದ ಪಶು ಸಂಗೋಪನೆಗೆ ಆದ್ಯತೆ ನೀಡಬೇಕೆಂದರು.ಜಿಲ್ಲೆಯಲ್ಲಿ ಕೃಷಿ ಪೂರಕ ಸಾಕಷ್ಟು ಉತ್ತಮ ವಾತಾವರಣವಿದ್ದು ನೈಸರ್ಗಿಕ ಸಂಪತ್ತಭರಿತವಾಗಿದೆ. ಈ ಭಾಗದಲ್ಲಿ ಹೈನುಗಾರಿಕೆ, ಕೋಳಿ, ಕುರಿ ಮತ್ತು ಮೀನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 20 ವರ್ಷಗಳ ಹಿಂದೆ ಬೀದರ್ ಜಿಲ್ಲೆಯಲ್ಲಿ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆರಂಭಿಸಲಾಗಿದೆ. ಸರ್ಕಾರವು ಹೈನುಗಾರಿಕೆ ಸೇರಿದಂತೆ ಕೃಷಿ ಪೂರಕವಾದಂತಹ ಚಟುವಟಿಕೆಗಳಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ. ಬಡ್ಡಿ ರಹಿತ ಸಾಲ, ರೋಗಗಳನ್ನು ತಡೆಗಟಲು ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಉತ್ತಮ ಮೇವಿನ ಕಿಟ್ಟುಗಳನ್ನು ನೀಡಲಾಗುತ್ತಿದೆ. ರೈತರು ಹಾಗೂ ವಿಜ್ಞಾನಿಗಳ ಜೊತೆ ಸಂವಾದ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅಗತ್ಯವಾದಂತಹ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾತಿಗಾಗಿ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ತಿಳಿಸಿದರು. ತಾತ್ಕಾಲಿಕ ಬೋಧಕ-ಬೋಧಕೇತರ ಹುದ್ದೆಗಳ ಭರ್ತಿಗೂ ಸಹ ಕ್ರಮ ಕೈಗೊಳ್ಳ ಲಾಗುವುದು. ಅಲ್ಲದೇ ಕೆಕೆಆರ್‌ಡಿಬಿ ಅಡಿಯಲ್ಲಿ ಹೆಚ್ಚಿನ ಅನುದಾನ ನೀಡಲು ಸಹ ಯೋಜಿಸಲಾಗುವುದೆಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸ್ಮರಣ ಸಂಚಿಕೆ ಮತ್ತು ಇತರೆ ಪ್ರಕಟಣೆಗಳ ಬಿಡುಗಡೆ ಹಾಗೂ ತಂತ್ರಜ್ಞಾನ ಆಧಾರಿತ ತಳಿ ಗುರುತಿಸುವ ಮೊಬೈಲ್ ಆ್ಯಪ್ ಲೋಕಾರ್ಪಣೆಗೊಳಿಸಿ ಹಾಗೂ ರಾಜ್ಯದ 31 ಜಿಲ್ಲೆಗಳ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯರು, ಭಾಲ್ಕಿ ಮಠದ ಗುರುಬಸವ ಪಟ್ಟದ್ದೇವರು, ಪಶು ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯುಕ್ತರಾದ ರೂಪಾ, ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ, ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಲತಾ ಡಿ.ಎಚ್. ಡಾ.ವೆಂಕಟಾಚಲ ವಿ.ಎಚ್., ಡಾ.ಎಚ್.ಎಂ.ಜಯಪ್ರಕಾಶ, ಸಂಗಪ್ಪ ದೊಡ್ಡಬಸಪ್ಪಾ ವಾಲೀಕರ, ಬಸವರಾಜ ಪಿ.ಭತಮೂರ್ಗೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೇಗಾರ, ದಿನೇಶ ಕುಮಾರ ಕಲ್ಲೇರ, ಕುಲಸಚಿವರಾದ ಡಾ.ಪಿ.ಟಿ.ರಮೇಶ, ಯಾದಲಾಪೂರ ಗ್ರಾಮ ಪಂಚಾಯತ ಅಧ್ಯಕ್ಷೆ ಸಪ್ನಾ ಸಂಜೀವಕುಮಾರ, ವಿಶ್ವವಿದ್ಯಾಲಯದ ಡೀನ್ ಡಾ.ಎಂ.ಕೆ.ತಾಂದಳೆ, ವಿಸ್ತರಣಾ ಅಧಿಕಾರಿ ಬಸವರಾಜ ಅವಟಿ, ವಿವಿಧ ಇಲಾಖೆಗಳ ಉಪನಿರ್ದೇಶಕರು ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.