ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ವಂಚಿತ 3 ಸಾವಿರ ಕುಟುಂಬ

| Published : Jan 18 2025, 12:46 AM IST

ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ವಂಚಿತ 3 ಸಾವಿರ ಕುಟುಂಬ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದ್ದು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ದೊಡ್ಡಬಳ್ಳಾಪುರ: ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದ್ದು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒಂದು ದೇಶ ಒಂದು ಪಡಿತರ ಯೋಜನೆ ಜಾರಿಯಾಗಿ ದೇಶದ ಜನರು ದೇಶದ ಯಾವುದೇ ಪಡಿತರ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾದ ಸೌಲಭ್ಯವಿದೆ. ಆದರೆ ಹೊರ ರಾಜ್ಯದಿಂದ ಬಂದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಪಡಿತರ ಪಡೆಯಲು ಆಗುತ್ತಿಲ್ಲ ಎಂಬ ಮಾಹಿತಿ ಬಂದಿದ್ದು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ವರದಿ ಸಲ್ಲಿಸುವಂತೆ ತಿಳಿಸಿದರು.

ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳ್ಳಲಿ:

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರ ಮೂಲಕ ಕಸ ವಿಲೇವಾರಿ ಘಟಕಗಳ ಸದ್ಬಳಕೆ ಆಗಬೇಕು ಎಂದರು.

ಬಾಣಂತಿ, ಶಿಶುಗಳ ಸಾವು ತಡೆಗಟ್ಟಿ:

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. ಇದರಿಂದ ಗರ್ಭಿಣಿಯರ, ಶಿಶುಗಳ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದರು.

ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣಗಳು ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆ ಜತೆಗೆ ಪೋಲಿಸ್ ಇಲಾಖೆ ಜಂಟಿಯಾಗಿ ಕಾರ್ಯ ಪ್ರವೃತರಾಗಿ ಕೆಲಸ ಮಾಡಬೇಕು. ಬಾಲ್ಯ ವಿವಾಹ ಪ್ರಕರಣ ದಾಖಲಾಗಿ ಇತ್ಯರ್ಥ ಆಗುವ ವರೆಗೆ ವರದಿ ಪಡೆದು ನಿಗಾ ವಹಿಸಬೇಕು ಎಂದರು.

ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ, ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರುವಲ್ಲಿ ಕೆಲಸ ಮಾಡಲಾಗುವುದು ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್‌...........

ಪರೀಕ್ಷಾ ಫಲಿತಾಂಶ ಸುಧಾರಿಸಿ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದು ಹೇಳಿದರು.

ಫೋಟೋ-

17ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ದಿಶಾ ಸಮಿತಿ ಸಭೆ ಸಂಸದ ಡಾ.ಕೆ.ಸುಧಾಕರ್‌ ಅಧ್ಯಕ್ಷತೆಯಲ್ಲಿ ನಡೆಯಿತು.