ಜಿಲ್ಲೆಯಲ್ಲಿ 3 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

| Published : Mar 01 2024, 02:17 AM IST

ಸಾರಾಂಶ

ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸುವ ಕುರಿತು ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಲ್ಸ್ ಪೊಲಿಯೋ ಕಾರ್ಯಕ್ರಮ ಮಾರ್ಚ್ 3 ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾರ್ಚ್ 4, 5 ಮತ್ತು 6 ರಂದು 3 ದಿನಗಳ ಕಾಲ ನಗರ ,ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಾ.3 ರಂದು ಬೂತ್‌ಗಳಿಗೆ ತೆರಳಿ ಪೊಲಿಯೋ ಹನಿ ಹಾಕಿಸದೆ ಇರುವ ಮಕ್ಕಳಿಗೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ಶಾಲೆಗಳು, ಬಸ್ ನಿಲ್ದಾಣಗಳಲ್ಲಿ, ಜನದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೊಲಿಯೋ ಹನಿ ಹಾಕಲು ಕ್ರಮ ವಹಿಸಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ, ಮೆಸ್ಕಾಂ ಅಧಿಕಾರಿಗಳು ಪಲ್ಸ್ ಪೊಲಿಯೋ ಕಾರ್ಯಕ್ರಮದ ದಿನ ವಿದ್ಯುತ್ ಸಂಪರ್ಕ ನಿರಂತರವಾಗಿ ಕಲ್ಪಿಸಬೇಕು. ಕಾರ್ಯಕ್ರಮ ಯಶಸ್ವಿಗೆ ರೋಟರಿ ಲಯನ್ಸ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 74,592 ಮಕ್ಕಳಿದ್ದಾರೆ 1,016 ಬೂತ್‌ಗಳನ್ನು ಸ್ಥಾಪಿಸಲಾಗಿದೆ. 3898 ಸಿಬ್ಬಂದಿಗಳು ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, 208 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮಾರ್ಚ್ 4, 5 ಮತ್ತು 6 ರಂದು ಮೂರು ದಿನಗಳ ಕಾಲ ನಗರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಾ. 3 ರಂದು ಬೂತ್‌ಗಳಿಗೆ ತೆರಳಿ ಪೊಲಿಯೋ ಲಸಿಕೆ ಹಾಕಿಸದೆ ಇರುವ ಮಕ್ಕಳನ್ನು ಗುರುತಿಸಿ ಪೊಲಿಯೋ ಹನಿ ಹಾಕಲಾಗುತ್ತದೆ. ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಅವರು ಕೋರಿದರು. ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ, ಆರ್.ಸಿ.ಎಚ್ ಅಧಿಕಾರಿ ಡಾ. ಮಂಜುನಾಥ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಬಾಲಕೃಷ್ಣ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಜರಿದ್ದರು.

29 ಕೆಸಿಕೆಎಂ 1