ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 (ಜೆ) ಕಲಂ ಕಲ್ಪವೃಕ್ಷ

| Published : Sep 18 2024, 01:48 AM IST

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 (ಜೆ) ಕಲಂ ಕಲ್ಪವೃಕ್ಷ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಕಲ್ಯಾಣ ಕರ್ನಾಟಕದ ಭಾಗದ ಸಮಗ್ರ ಅಭಿವೃದ್ಧಿಗೆ ಸಂವಿಧಾನದ 371(ಜೆ) ಕಲಂ ಕಾಮದೇನು, ಕಲ್ಪವೃಕ್ಷವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ಇಲ್ಲಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ 77ನೇ ಕಲ್ಯಾಣ ಕರ್ನಾಟಕ ಉತ್ಸವ (ವಿಮೋಚನಾ ದಿನಾಚರಣೆ)ದ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ದಶಕದ ಹಿಂದೆ ಈ ಭಾಗಕ್ಕೆ 371(ಜೆ) ನೀಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಅದರಿಂದಾಗಿಯೇ ಇಂದು ವೈದ್ಯಕೀಯ, ಎಂಜಿನಿಯರಿಂಗ್‌ನಲ್ಲಿ ಸೀಟು ಹಾಗೂ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಲಭಿಸುತ್ತಿದ್ದು, ಇಷ್ಟೇ ಅಲ್ಲದ ಭೌಗೋಳಿಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ₹5 ಸಾವಿರ ಕೋಟಿ ಸಹ ಘೊಷಣೆ ಮಾಡಲಾಗಿದೆ ಎಂದು ತಿಳಿಸಿದರು.371(ಜೆ)ಅನುಷ್ಠಾನಗೊಂಡ 10 ವರ್ಷಗಳಲ್ಲಿ ಸಾಕಷ್ಟು ಸಾಧನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ 960, ಎಂಜಿನಿಯರಿಂಗ್‌ನಲ್ಲಿ 3 ಸಾವಿರಕ್ಕು ಹೆಚ್ಚು ಸೀಟುಗಳು ಲಭಿಸಿದ್ದು, ಇಲ್ಲಿಯವರೆಗೆ ಸುಮಾರು 8 ಸಾವಿರಕ್ಕು ಹೆಚ್ಚು ವೈದ್ಯರಾಗಿದ್ದಾರೆ.

ಕೆಕೆಆರ್‌ಡಿಬಿ ಅನುದಾನವನ್ನು3 ಸಾವಿರದಿಂದ 5 ಸಾವಿರ ಕೋಟಿಗೆ ಹೆಚ್ಚಿಸಲಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಉಳಿದಿರುವ 15ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ 371(ಜೆ) ಅತ್ಯಂತ ಉಪಯೋಗಕಾರಿಯಾಗಿದ್ದು, ಅದರ ಲಾಭವನ್ನು ಈ ನೆಲದ ಮಕ್ಕಳು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು, ಶಾಸಕ ಬಸನಗೌಡ ದದ್ದಲ್, ಎಂಎಲ್‌ಸಿ ಎ.ವಸಂತ ಕುಮಾರ, ಸಂಸದ ಕುಮಾರ ನಾಯಕ, ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಆರ್‌ಡಿಎ ಅಧ್ಯಕ್ಷ ರಾಜಶೇಖರ್ ರಾಮಸ್ವಾಮಿ, ಡಿಸಿ ನಿತೀಶ ಕೆ, ಜಿಪಂ ಸಿಇಒ ಪಾಂಡ್ವೆ ರಾಹುಲ್‌ ತುಕಾರಾಂ, ಎಸ್‌ಪಿ ಪುಟ್ಟ ಮಾದಯ್ಯ ಸೇರಿ ಮುಖಂಡರು, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಶಾಲಾ ಮಕ್ಕಳು, ಸಾರ್ವಜನಿಕರು ಇದ್ದರು.