ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲೆಯಲ್ಲಿ ಬರದಿಂದ ನಷ್ಟಕ್ಕೊಳಗಾದ 27 ಸಾವಿರ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 4.86 ಕೋಟಿ ರು. ಪರಿಹಾರ ಬಿಡುಗಡೆ ಮಾಡಿವೆ. 9 ಹಂತಗಳಲ್ಲಿ ರಾಜ್ಯ ಸರ್ಕಾರ ಮತ್ತು 10ನೇ ಹಂತದಲ್ಲಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಪರಿಹಾರ ಮೊತ್ತವನ್ನು ಎಲ್ಲ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.ಅವರು ಶುಕ್ರವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯಲ್ಲಿ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ಬರ ಪೀಡಿತ ಪ್ರದೇಶ ಎಂಬುದಾಗಿ ಸರ್ಕಾರ ಘೋಷಿಸಿದೆ. ಜಿಲ್ಲೆಯಲ್ಲಿ ಬರದಿಂದ ಬತ್ತ ಬೆಳೆಗೆ 11 ಕೋಟಿ ರು. ನಷ್ಟವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ ಎಕ್ರೆಗೆ 2 ಸಾವಿರ ರು.ಗಳಂತೆ ಇದುವರೆಗೆ 4.86 ಕೋಟಿ ರು. ಪರಿಹಾರ ಬಿಡುಗಡೆಯಾಗಿದೆ ಎಂದರು.ಜಿಲ್ಲೆಯ ಕೆಲವು ಗ್ರಾ.ಪಂ. ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕುಡಿವ ನೀರಿನ ಪರಿಹಾರಕ್ಕಾಗಿ ಬರಪೀಡಿತ 3 ಜಿಲ್ಲೆಗಳಿಗೆ 4.50 ಕೋಟಿ ರು. ಅನುದಾನ ನೀಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ ಎಂದವರು ಹೇಳಿದರು.
ಉಡುಪಿ ನಗರಕ್ಕೆ ನೀರು ಪೂರೈಸುವ ಸುವರ್ಣ ನದಿಯಲ್ಲಿ ನೀರಿನ ಮಟ್ಟ 3 ಅಡಿಗೆ ಇಳಿದಿದ್ದು, ಮೇ 4ರಿಂದ ಕುಡಿಯುವ ನೀರಿನ ರೇಶನಿಂಗ್ ಆರಂಭಿಸಲಾಗಿದೆ. ಈ ಬಾರಿ ಕಾರ್ಕಳದ ಮುಂಡ್ಲಿ ಜಲಾಶಯದಲ್ಲಿ ಸಾಕಷ್ಟು ನೀರಿದ್ದು, ಕಾರ್ಕಳ ನಗರಕ್ಕೆ ನೀರಿನ ಸಮಸ್ಯೆಯಾಗಿಲ್ಲ ಎಂದರು.ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಉತ್ತಮ ಮಳೆಯಾಗುವ ಸಂಭವದ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ವಾರ ಮುಂಗಾರು ಮಳೆ ಆರಂಭವಾಗಲಿದ್ದು, ನೀರಿನ ಸಮಸ್ಯೆ ಬಗಹರಿಯುವ ವಿಶ್ವಾಸ ಇದೆ ಎಂದರು.
* 23 ಕಡೆ ಟ್ಯಾಂಕರ್ ನೀರು: ಸಿಇಓಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಬಹ್ಮಾವರ, ಕುಂದಾಪುರ, ಹೆಬ್ರಿ, ಬೈಂದೂರು ತಾಲೂಕಿನ 23 ಗ್ರಾ.ಪಂ.ಗಳ ಕೆಲವು ಜನವಸತಿ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭ ನಗರಸಭೆ ಪೌರಾಯುಕ್ತ ರಾಯಪ್ಪ, ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಉಪಸ್ಥಿತರಿದ್ದರು.ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.ಸಿಡಿಲಿನ ಮುನ್ಸೂಚನೆಗೆ ದಾಮಿನಿ ಆ್ಯಪ್
ಮಳೆಗಾಲದಲ್ಲಿ ಸಿಡಿಲು ಸಂಭವಿಸುವುದನ್ನು 7 ನಿಮಿಷಗಳ ಮೊದಲೇ ಮುನ್ನೆಚ್ಚರಿಕೆ ನೀಡುವ ದಾಮಿನಿ ಎಂಬ ಆ್ಯಪ್ ಲಭ್ಯವಿದೆ. ಎಲ್ಲ ಭಾಷೆಗಳಲ್ಲೂ ಇದನ್ನು ಬಳಸಬಹುದಾಗಿದೆ. ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಹೇಳಿದರು.