ಮತದಾನಕ್ಕೆ 40000 ಪೊಲೀಸರಿಂದ ಭದ್ರತೆ

| Published : May 07 2024, 01:01 AM IST

ಸಾರಾಂಶ

70 ಕೇಂದ್ರ, 150 ರಾಜ್ಯ ತುಕಡಿ ನಿಯೋಜನೆ ಮಾಡಲಾಗಿದ್ದು, ದಕ್ಷಿಣ ಕರ್ನಾಟಕದ ಸಿಬ್ಬಂದಿ ಉತ್ತರಕ್ಕೆ ಶಿಫ್ಟ್‌ ಆಗಿ ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸಲು 40 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆರ್‌.ಹಿತೇಂದ್ರ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ, ದಾವಣಗೆರೆ, ಧಾರವಾಡ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸ್ಥಳೀಯ ಪೊಲೀಸರ ಜತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ತುಕಡಿ ಕೆಎಸ್‌ಆರ್‌ಪಿ, ಡಿಎಆರ್‌ ತುಕಡಿಗಳು, ಗೃಹರಕ್ಷ ಸಿಬ್ಬಂದಿ ಸೇರಿದಂತೆ 40ಕ್ಕೂ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.

ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. ಹೀಗಾಗಿ ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ಇತರೆ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ಬಳಿ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸಲಾಗಿದೆ. ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮತದಾನದ ವೇಳೆ ಹಿರಿಯ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಲಿದ್ದಾರೆ ಎಂದು ಹೇಳಿದರು.