45000 ಅತಿಥಿ ಶಿಕ್ಷಕರ ನೇಮಕಕ್ಕೆ ಅಸ್ತು

| Published : Jun 04 2024, 12:31 AM IST / Updated: Jun 04 2024, 09:14 AM IST

teacher .jpg

ಸಾರಾಂಶ

2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರನ್ನು ಅಗತ್ಯಾನುಸಾರ ತಾತ್ಕಾಲಿಕ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.

  ಬೆಂಗಳೂರು :  ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರನ್ನು ಅಗತ್ಯಾನುಸಾರ ತಾತ್ಕಾಲಿಕ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವ ದೃಷ್ಟಿಯಿಂದ ಕಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಅಗತ್ಯಾನುಸಾರ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಬೇಕು. 

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 10 ಸಾವಿರ ರು. ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 10,500 ರು. ಗೌರವಧನ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ. ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರವು ಸಹಮತಿ ನೀಡಿದೆ. ಆದರೆ, ಮೊದಲ ಹಂತದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33,863 ಹುದ್ದೆಗಳಿಗೆ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತಿಳಿಸಿದೆ.

ಹಾಗೆಯೇ ಪ್ರೌಢಶಾಲೆಗೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಿದೆ. ಸದ್ಯ ಪ್ರೌಢಶಾಲೆಯಲ್ಲಿ 8,954 ವಿಷಯ ಶಿಕ್ಷಕರ ಕೊರತೆ ಇದೆ. ಮೊದಲ ಹಂತದಲ್ಲಿ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಷರತ್ತುಗಳು: ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು. ಮುಖ್ಯ ಶಿಕ್ಷಕರ ಮೂಲಕವೇ ನೇಮಕಾತಿ ಮಾಡಬೇಕು. ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು. 

ವಿಶೇಷವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳು, ದ್ವಿಭಾಷಾ, ಆಂಗ್ಲ ಭಾಷಾ ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇ.100 ರಷ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಬೇಕು. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು.