ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲೆಯ ವಿವಿಧೆಡೆ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ 489 ಅರ್ಜಿಗಳ ಪೈಕಿ 456 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿ ಮತ್ತು ಕೈಗೊಂಡಿರುವ ಪರಿಹಾರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಸೆ. 25ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಸ್ವೀಕರಿಸಲಾಗಿದ್ದ 221 ಅರ್ಜಿಗಳಲ್ಲಿ 216 ಅರ್ಜಿಗಳನ್ನು ವಿಲೇವಾರಿಗೊಳಿಸಲಾಗಿದೆ. ಅ. 13ರಂದು ಗುಂಡ್ಲುಪೇಟೆ ತಾಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ನಡೆದ ಜನತಾದರ್ಶನದಲ್ಲಿ ಸ್ವೀಕೃತವಾದ 131 ಅರ್ಜಿಗಳ ಪೈಕಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ನ. 27ರಂದು ಕೊಳ್ಳೇಗಾಲ ತಾಲೂಕುಮಟ್ಟದ ಜನತಾ ದರ್ಶನದಲ್ಲಿ ಶಾಸಕರ ನೇತೃತ್ವದಲ್ಲಿ ಸಲ್ಲಿಕೆಯಾದ 137 ಅರ್ಜಿಗಳಲ್ಲಿ 109 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರು, ಸಮಸ್ಯೆ, ಕುಂದುಕೊರತೆಗಳ ಅರ್ಜಿಗಳನ್ನು ವಿಳಂಬ ಮಾಡದೇ ಪರಿಹರಿಸಬೇಕು. ಜನರ ಸಂಕಷ್ಟಗಳಿಗೆ ಸ್ಪಂದಿಸಿ ಅರ್ಜಿಗಳನ್ನು ಸೂಕ್ತವಾಗಿ ಇತ್ಯರ್ಥಪಡಿಸಬೇಕು. ವಿಳಂಬ ಧೋರಣೆಗೆ ಅವಕಾಶವಾಗಬಾರದು. ಅರ್ಜಿಗಳನ್ನು ಸ್ವೀಕರಿಸಿದ ಬಳಿಕ ಕೂಲಂಕುಶವಾಗಿ ಪರಿಶೀಲಿಸಬೇಕು. ಸಮಸ್ಯೆ ಇತ್ಯರ್ಥಕ್ಕೆ ಪರಿಹಾರಗಳನ್ನು ಕಂಡುಕೊAಡು ದೂರುದಾರರಿಗೆ ಹಾಗೂ ಅರ್ಜಿದಾರರಿಗೆ ತಿಳಿಸಬೇಕು. ನಿಮ್ಮ ಹಂತದಲ್ಲಿಯೇ ಪರಿಹರಿಸಲು ಸಾಧ್ಯವಾಗದೇ ಇದ್ದ ಸಂದರ್ಭದಲ್ಲಿ ಉನ್ನತ ಹಂತಕ್ಕೆ ಕಳುಹಿಸಿಕೊಡಬೇಕು. ಸ್ವೀಕರಿಸಿದ ಅರ್ಜಿಗಳಿಗೆ ಸೂಕ್ತ ಹಿಂಬರಹ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಫಲಾನುಭವಿಗಳು ಯಾವುದೇ ತಾಂತ್ರಿಕ ತೊಂದರೆಯಿಂದಾಗಿ ಸೌಲಭ್ಯಗಳಿಂದ ವಂಚಿತರಾಗಬಾರದು. ತಾಂತ್ರಿಕ ತೊಂದರೆಗಳು, ಇನ್ನಿತರ ಸಮಸ್ಯೆಗಳ ಇತ್ಯರ್ಥಕ್ಕಾಗಿ ತಾಲೂಕುಮಟ್ಟದಲ್ಲಿ ಶಿಬಿರ ನಡೆಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಧಿಕಾರಿಗಳು ಎಲ್ಲಾ ಬಗೆಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಫಲಾನುಭವಿಗಳಿಂದ ಸ್ವೀಕರಿಸಲಾದ ಅರ್ಜಿಗಳನ್ನು ಅದಷ್ಟು ಬೇಗನೇ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಇದೇ ವೇಳೆ ನಿರ್ದೇಶನ ನೀಡಿದರು.ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಬೀಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಹನುಮೇಗೌಡ, ಸಹಕಾರ ಸಂಘಗಳ ಉಪ ನಿಬಂಧಕರಾದ ಜ್ಯೋತಿ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.