ಸಾರಾಂಶ
ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಗುರುತಿಸಲ್ಪಟ್ಟ ೫೭,೧೪೯ ಪ್ರಕರಣಗಳಲ್ಲಿ ೪೬,೭೫೨ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು.೩೧,೪೪,೯೪,೬೧೯ ಮೊತ್ತದ ರಾಜೀಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ.ಸದಾನಂದಸ್ವಾಮಿ ಅವರು ತಿಳಿಸಿದರು.ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ ೬೫೮೮ ಪ್ರಕರಣಗಳ ಪೈಕಿ ೪,೫೫೫ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು. ೨೦,೧೨,೨೧,೫೦೧-ಗಳ ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ ೫೦,೫೬೧ ಪ್ರಕರಣಗಳಲ್ಲಿ ೪೨,೧೯೭ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. ೧೧,೩೨,೭೩,೧೧೮ಗಳ ಮೊತ್ತದ ರಾಜೀಯಾಗಿದೆ ಎಂದರು.ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆರು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀಮಾಡಿಕೊಂಡು ಮತ್ತೆ ಒಂದಾಗಿದ್ದಾರೆ. ಹಾವೇರಿ ಮತ್ತು ಶಿಗ್ಗಾಂವ ನ್ಯಾಯಾಲಯದಲ್ಲಿ ತಲಾ ಎರಡು, ಬ್ಯಾಡಗಿ ಮತ್ತು ಹಾನಗಲ್ ನ್ಯಾಯಾಲಯದಲ್ಲಿ ತಲಾ ಒಂದು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜಿಮಾಡಿಕೊಂಡು ಮತ್ತೆ ಒಂದಾಗಿದ್ದಾರೆ.ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯವಾದಿಗಳ ಸಂಘ, ಹಾವೇರಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು, ಇತರೇ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ತುಂಬಾ ಯಶಸ್ವಿಯಾಗಿ ಜರುಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.