ಕುಡಿವ ನೀರಲ್ಲಿ ಕಾರು ತೊಳೆದರೆ ₹5 ಸಾವಿರ ದಂಡ: ಜಲಮಂಡಳಿ

| Published : Mar 09 2024, 01:34 AM IST / Updated: Mar 09 2024, 01:04 PM IST

ಕುಡಿವ ನೀರಲ್ಲಿ ಕಾರು ತೊಳೆದರೆ ₹5 ಸಾವಿರ ದಂಡ: ಜಲಮಂಡಳಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಕಾರು ತೊಳೆಯಲು, ಕೈತೋಟಕ್ಕೆ ಬಳಕೆ ಮಾಡಿದರೆ ₹5 ಸಾವಿರ ದಂಡ ವಿಧಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜಧಾನಿ ಬೆಂಗಳೂರು ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿರುವುದರಿಂದ ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿದೆ. 

ನಿಯಮ ಉಲ್ಲಂಘಿಸಿದವರಿಗೆ ₹5 ಸಾವಿರ ದಂಡ ವಿಧಿಸುವುದಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಬಳಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ನೀಷೇಧಿಸಲಾಗಿದೆ.

ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ₹5 ಸಾವಿರ ದಂಡ ವಿಧಿಸಲಾಗುವುದು. 

ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡದ ಮೊತ್ತ ₹5 ಸಾವಿರ ಜತೆಗೆ ಹೆಚ್ಚುವರಿಯಾಗಿ ₹500 ಪ್ರತಿ ದಿನದಂತೆ ದಂಡ ಹಾಕಲಾಗುವುದು ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸಬಹುದು.

ಬೆಂಗಳೂರು ಮಹಾನಗರದ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1.40 ಕೋಟಿ ಜನಸಂಖ್ಯೆ ಇದ್ದು, ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. 

ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವಿದೆ. 

ಇದನ್ನು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಆಗತ್ಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.