ಸಾರಾಂಶ
ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆದಾಯ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ವ್ಯಾಪ್ತಿಯಲ್ಲಿ 50 ಅಕ್ಕ ಕೆಫೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.
ಬೆಳಗಾವಿ : ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆದಾಯ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ವ್ಯಾಪ್ತಿಯಲ್ಲಿ 50 ಅಕ್ಕ ಕೆಫೆಗಳನ್ನು ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಪಂ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ಗುರುವಾರ ಜಿಪಂ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಅಕ್ಕ ಕೆಫೆ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ಹೊರತುಪಡಿಸಿ ಬೆಳಗಾವಿಯಲ್ಲಿ ಅಕ್ಕ ಕೆಫೆ ಕ್ಯಾಂಟೀನ್ ಪ್ರಾರಂಭಿಸಲಾಗಿದೆ. ಸ್ವ-ಸಹಾಯ ಸಂಘಗಳಿಗೆ ಆದಾಯ ಒದಗಿಸುವ ವಿನೂತನ ಯೋಜನೆ ಇದಾಗಿದೆ. ಇಡೀ ರಾಜ್ಯದಲ್ಲಿ ಮೂರು ಅಕ್ಕ ಕೆಫೆ ಪ್ರಾರಂಭದಲ್ಲಿವೆ. ಬರುವಂತಹ ದಿನಗಳಲ್ಲಿ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ಪ್ರಾರಂಭಿಸಲಾಗುವುದು. ಕೆಫೆ ನಿರ್ವಹಣೆಗಾಗಿ ಸುಮಾರು ₹15 ಲಕ್ಷ ಸಹಾಯ ಧನ ನೀಡಲಾಗುತ್ತಿದೆ ಎಂದು ಹೇಳಿದರು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಸರ್ಕಾರ ಸ್ವಾವಲಂಬಿ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ವಿನೂತನ ಯೋಜನೆಗಳನ್ನು ಬಳಕೆ ಮಾಡಿಕೊಂಡು ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಆವರಣದಲ್ಲಿ ಸಂಜೀವಿನಿ ಸ್ವ-ಸಹಾಯ ಸಂಘಗಳ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಅವಸರ ಮಳಿಗೆ ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
ಅಕ್ಕ ಕೆಫೆ ಆಹಾರ ಗುಣಮಟ್ಟ-ಶುಚಿ-ರುಚಿಗೆ ಮೆಚ್ಚುಗೆ: ಇದಕ್ಕೂ ಮುಂಚೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ ಪಾಟೀಲ, ಶಾಸಕ ಆಸೀಫ್ (ರಾಜು) ಸೇಠ ಅವರು ಅಕ್ಕ ಕೆಫೆಯಲ್ಲಿ ತಯಾರಿಸಲಾದ ಅಲ್ಪೋಪಹಾರ ಸೇವಿಸಿ, ಆಹಾರ ಗುಣಮಟ್ಟ ಪರಿಶೀಲಿಸಿದರು.
ಅಕ್ಕ ಕೆಫೆ ಮಹಿಳಾ ಸಿಬ್ಬಂದಿ ತಯಾರಿಸಿದ ಆಹಾರ ಗುಣಮಟ್ಟ ಹಾಗೂ ಶುಚಿ-ರುಚಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಪಂ ಹೆಚ್ಚುವರಿ ಕೊಠಡಿ ಉದ್ಘಾಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಜಿಪಂ ಕಟ್ಟಡ ನಿರ್ಮಾಣ ಮತ್ತು ಕಟ್ಟಡ ನಿರ್ವಹಣೆ ಯೋಜನೆಯಡಿ ದಾಖಲೆಗಳ ಕ್ರೊಢೀಕರಣಕ್ಕಾಗಿ ಹೆಚ್ಚುವರಿಯಾಗಿ ನಿರ್ಮಿಸಲಾದ ಜಿಪಂ 2ನೇ ಮಹಡಿಯಲ್ಲಿನ ನೂತನ ಕೊಠಡಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಶಾಸಕ ಆಸೀಫ್ (ರಾಜು) ಸೇಠ, ಶಾಸಕ ಶರತ್ ಕುಮಾರ ಬಚ್ಚೇಗೌಡ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶ್ ಕುಮಾರ ಮೀನಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.