ಶಕ್ತಿ ಯೋಜನೆಯ 500 ಕೋಟಿ ಟಿಕೆಟ್ ವಿತರಣೆ: ಕೆ. ರಾಜು

| Published : Jul 15 2025, 01:01 AM IST

ಸಾರಾಂಶ

ಇವತ್ತು ನಾವೆಲ್ಲ ಒಳ್ಳೆಯ ದಿನಗಳನ್ನು ಕಾಣುತ್ತಿದ್ದೇವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಈ ರೀತಿಯ ಯೋಜನೆಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡಿ ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರ.

ಕನ್ನಡಪ್ರಭ ವಾರ್ತೆ ರಾಮನಗರ

ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ. ರಾಜು ಅವರ ನೇತೃತ್ವದಲ್ಲಿ ಜು. 14ರ ಸೋಮವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ. ರಾಜು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ನೀಡಿದ ಆಶ್ವಾಸನೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಈ ಗ್ಯಾರಂಟಿಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೇಟುಗಳ ಸಂಖ್ಯೆ ಇಂದು 500 ಕೋಟಿ ತಲುಪಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಿದೆ. 8 ಕೋಟಿಗೂ ಅಧಿಕ ಬಾರಿ ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು 229 ಕೋಟಿಗೂ ಹೆಚ್ಚಿನ ಹಣವನ್ನು ಖರ್ಚುಮಾಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ, ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಎಲ್ಲಾ ಸದಸ್ಯರು ಫಲಾನುಭವಿಗಳಿಗೆ ಈ ಯೋಜನೆಯನ್ನು ತಲುಪಿಸಲು ಕ್ರಮವಹಿಸುತ್ತಿದ್ದಾರೆ ಎಂದು ಹೇಳಿದರು.

2023ರ ಜೂನ್ 11ರಂದು ಶಕ್ತಿ ಯೋಜನೆಗೆ ಜಾರಿಗೆ ಬಂದು ಕಳೆದ ಎರಡು ವರ್ಷ ಒಂದು ತಿಂಗಳಲ್ಲಿ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಸಾಮಾನ್ಯ ಸಾರಿಗೆ ಬಸ್ಸುಗಳಲ್ಲಿ ಇದುವರೆಗೆ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೇಟುಗಳ ಸಂಖ್ಯೆ ಇಂದು 500 ಕೋಟಿ ತಲುಪಿದೆ. ಈ ಮೂಲಕ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ತಲುಪಿದೆ, ಇವತ್ತು ನಾವೆಲ್ಲ ಒಳ್ಳೆಯ ದಿನಗಳನ್ನು ಕಾಣುತ್ತಿದ್ದೇವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಈ ರೀತಿಯ ಯೋಜನೆಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡಿ ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂದರು.

ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರಾದ ವಿ.ಎಚ್. ರಾಜು , ಶಿವಣ್ಣ, ಅಶೋಕ್, ಸದಸ್ಯರಾದ ಶೋಭಾ, ಸ್ವಾಮಿ, ಭೈರವೇಶ್, ಜಯಣ್ಣ, ಕಾಳಮ್ಮ , ಬಮೂಲ್ ನಿರ್ದೇಶಕ ಹರೀಶ್ ಕುಮಾರ್ , ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು ಸೇರಿದಂತೆ ಕೆಎಸ್‌ಆರ್‌ಟಿಸಿಯ ಚಾಲಕರು, ನಿರ್ವಾಹಕರು, ಮಹಿಳಾ ಪ್ರಯಾಣಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.