ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಕಾರ್ಮಿಕ ಕಲ್ಯಾಣ ಯೋಜನೆಗಳಿಗೆ ವೆಚ್ಚ ಮಾಡಲು ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ಸುಮಾರು 5000 ಕೋಟಿ ರು. ಹಣ ಕಾರ್ಮಿಕ ಸಚಿವರ ಖಾತೆಯಲ್ಲಿ ಲಭ್ಯವಿದೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಶ್ರೀ ಎಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕ ಸಮುದಾಯದಲ್ಲಿ ಶೇ.೯೦ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಇವರ ಶ್ರೇಯೋಭಿವೃದ್ಧಿಗಾಗಿ ಜಾರಿ ಮಾಡಿರುವ ಯೋಜನೆಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಮಿಕ ಸಚಿವ ಸಂತೋಷ ಎಸ್. ಲಾಡ್ ಮಾತನಾಡಿ, ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ವಾಹನ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳಿಗಾಗಿ ಜಾರಿಗೆ ತಂದಿರುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 98 ಅಪಘಾತ ಪ್ರಕರಣಗಳಲ್ಲಿ 4.22 ಕೋಟಿ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆಯಲ್ಲದೆ, 74 ವಿದ್ಯಾರ್ಥಿಗಳಿಗೆ 7.40 ಲಕ್ಷ ರು.ಗಳ ಶೈಕ್ಷಣಿಕ ಧನ ಸಹಾಯವನ್ನು ಪಾವತಿಸಲಾಗಿದೆ ಎಂದರು. ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಬದ್ಧವಾಗಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಕನಿಷ್ಠ ೧೦ ರಿಂದ ೧೫ ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಶಾಸಕ ಜ್ಯೋತಿ ಗಣೇಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಆಯಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ ಅವರು ಸಂವಿಧಾನ ಪೀಠಿಕೆ ಬೋಧಿಸಿದರು. ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಶಾಸಕ ಎಚ್.ವಿ. ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ ಗೌಡ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜು, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿತಿನ್ ರಾಜ್ ಮೌರ್ಯ,ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್ ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಜಿ., ಸೇರಿದಂತೆ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.