ಸಾರಾಂಶ
ವಿಜಯನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಕೆಲ ಸಮಸ್ಯೆಗಳ ಪರಿಹಾರಕ್ಕಾಗಿ ₹54 ಕೋಟಿ ಅನುದಾನ ಮಂಜೂರಾಗಿದೆ.
ಹೊಸಪೇಟೆ: ವಿಜಯನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಕೆಲ ಸಮಸ್ಯೆಗಳ ಪರಿಹಾರಕ್ಕಾಗಿ ₹54 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರವೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಸಂಸದ ಈ.ತುಕಾರಾಂ ಹೇಳಿದರು.ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಣಾಪುರ, ಆಲೂರು, ತಿಮ್ಮಲಾಪುರ ಸೇರಿದಂತೆ ಹೊಸಪೇಟೆಯಿಂದ ಆಲೂರುವರೆಗೆ ಇರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಡಣಾಪುರ ಬಳಿ ಮೇಲ್ಸೇತುವೆ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಅಂಚೆ ಇಲಾಖೆಯಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳನ್ನು ತ್ವರಿತವಾಗಿ ಪೂರೈಸಲಾಗುವುದು. ಜಿಲ್ಲೆಯಲ್ಲಿ ಎಲ್ಲರೂ ಟೀಂ ವರ್ಕ್ ಆಗಿ ಕೆಲಸ ಮಾಡಿ ಜನರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.ಗದಗ- ಹರಪನಹಳ್ಳಿ ರೈಲ್ವೆ ಮಾರ್ಗ ನಿರ್ಮಾಣ ವಿಚಾರ ಹಾಗೂ ಪುಣೆ ಹೆದ್ದಾರಿ ಮಾರ್ಗದ ಬಗ್ಗೆಯೂ ತಿಳಿದಿಲ್ಲ. ಈ ಯೋಜನೆಗಳ ಬಗ್ಗೆ ತಿಳಿದುಕೊಂಡು ಉತ್ತರಿಸುವೆ ಎಂದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ನಡೆದ ತಕ್ಷಣವೇ ಹೆದ್ದಾರಿ ಪ್ರಾಧಿಕಾರದಿಂದಲೇ ಆ್ಯಂಬುಲೆನ್ಸ್ ವ್ಯವಸ್ಥೆ ಒದಗಿಸುವುದನ್ನು ತ್ವರಿತವಾಗಿ ಕೈಗೊಳ್ಳಲಾಗುವುದು. ಹೆದ್ದಾರಿಗಳ ಕುರಿತ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.ಶಾಸಕರಾದ ಕೆ. ನೇಮರಾಜ್ ನಾಯ್ಕ, ಎಂ.ಪಿ. ಲತಾ, ಡಾ. ಎನ್.ಟಿ. ಶ್ರೀನಿವಾಸ್ ಮತ್ತಿತರರಿದ್ದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಈ.ತುಕಾರಾಂ ಮಾತನಾಡಿದರು.