ಸಾರಾಂಶ
ಹಳೇಹುಬ್ಬಳ್ಳಿ ಭಾಗದ 55 ಮಂದಿಯನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ, ಆಗಾಗ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಹಳೇಹುಬ್ಬಳ್ಳಿ ಭಾಗದ 55 ಮಂದಿಯನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ಕೈಗೊಂಡಿದ್ದರು. 33 ರೌಡಿಗಳು, 17 ಮಂದಿ ಪದೇ ಪದೇ ಅಪರಾಧ ಕೃತ್ಯದಲ್ಲಿ ಪಾಲ್ಗೊಳ್ಳುತ್ತಿದ್ದವರು ಹಾಗೂ ಈ ಹಿಂದೆ ಗಾಂಜಾ ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಸಾರ್ವಜನಿಕ ಪ್ರದೇಶದಲ್ಲಿ, ಬಡಾವಣೆಗಳಲ್ಲಿ ಮದ್ಯ ಸೇವನೆ ಮಾಡುತ್ತಿದ್ದ 24 ಮಂದಿಯನ್ನು ಸಹ ವಶಕ್ಕೆ ಪಡೆದು, ಕ್ರಮ ಕೈಗೊಂಡಿದ್ದಾರೆ. ವಶಕ್ಕೆ ಪಡೆದವರ ಹಿಂದಿನ ಹಾಗೂ ಇಂದಿನ ನಡವಳಿಕೆ ಹಾಗೂ ಅವರ ಅಪರಾಧ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬದಲಾವಣೆ ಕಂಡು ಬರದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೆಲವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.