ಕನ್ನಡಪ್ರಭ ವಾರ್ತೆ ಮಂಡ್ಯ
ಇಲ್ಲಿನ ಶಂಕರನಗರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ೬.೫ ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.ನೂತನವಾಗಿ ನಿರ್ಮಾಣವಾಗಿರುವ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕ್ಷೇತ್ರದ ಶಾಸಕನಾಗಿ ಮೂರು ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಿಸಿದ್ದೇನೆ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ. ಮುಂದಿನ ೬ ತಿಂಗಳಲ್ಲಿ ನೂತನ ಕಟ್ಟಡಗಳು ಉದ್ಘಾಟನೆಗೆ ಸಿದ್ಧವಾಗಲಿವೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಾಧನೆ ಮಾಡುವ ಛಲವನ್ನು ರೂಡಿಸಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಶಂಕರನಗರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಬಾಲಕಿಯರ ವಿದ್ಯಾರ್ಥಿನಿಲಯ ಸುಮಾರು ೬.೫ ಕೋಟಿ ರು. ವೆಚ್ಚದಲ್ಲಿ ತಲೆಎತ್ತಿದೆ. ೧೦೦ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಟ್ಟಡವನ್ನು ನಿರ್ಮಿಸಲಾಗಿದೆ. ನೂತನ ಕಟ್ಟಡವು ಮೂಲ ಸೌಕರ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿನಿಯರಿಗೆ ಎಲ್ಲ ರೀತಿಯ ಅನುಕೂಲಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ಜ್ಞಾನ ದೇಗುಲವೆಂದು ಭಾವಿಸಿ, ಉನ್ನತ ಶಿಕ್ಷಣ ಪಡೆದು ಗುರಿ ಮತ್ತು ಸಾಧನೆಯತ್ತ ಗಮನ ಹರಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮೂಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.