ಸಾರಾಂಶ
ಚನ್ನರಾಯಪಟ್ಟಣ: ಪೌಷ್ಟಿಕ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯ ಹಾಗೂ ಬುದ್ಧಿವಂತಿಕೆ ವೃದ್ಧಿಯಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಚನ್ನರಾಯಪಟ್ಟಣ: ಪೌಷ್ಟಿಕ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯ ಹಾಗೂ ಬುದ್ಧಿವಂತಿಕೆ ವೃದ್ಧಿಯಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಗೂರಮಾರನಹಳ್ಳಿ ಬಡಾವಣೆಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಹಾಗೂ ಅಕ್ಷರ ದಾಸೋಹದ ಮಧ್ಯಾಹ್ನ ಉಪಹಾರ ಯೋಜನೆಯಡಿ ಹಮ್ಮಿಕೊಂಡಿದ್ದ ವಾರದಲ್ಲಿ ೬ ದಿನಗಳು ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರವು ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಪೂರಕವಾಗಿ ಉತ್ತಮ ಯೋಜನೆಗಳನ್ನು ಜಾರಿಗೊಳಿಸುತಿದ್ದು ಸಮವಸ್ತ್ರ, ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಯು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಜತೆಗೆ ವಾರದ ೬ ದಿನಗಳು ಸಹ ಪೌಷ್ಠಿಕ ಆಹಾರ ವಿತರಣೆ ಕಾರ್ಯ ಹಮ್ಮಿಕೊಂಡಿರುವುದು ಒಳ್ಳೆ ಬೆಳವಣಿಗೆ ಎಂದರು.
ಆಹಾರ ತಯಾರಿಕೆಯಲ್ಲಿ ತಾಜಾ ತರಕಾರಿ ಬಳಕೆ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಯಾವುದೇ ಹಣ್ಣು-ತರಕಾರಿ ಬೆಳೆಯಲು ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ಹಾಗೂ ಔಷಧಗಳನ್ನು ಬಳಸಲಾಗುತ್ತಿದೆ. ಆದ್ದರಿಂದ ಆಹಾರ ತಯಾರಿಕೆಗೂ ಮುನ್ನ ತರಕಾರಿಗಳನ್ನು ಬಿಸಿ ನೀರಲ್ಲಿ ತೊಳೆದು ಸ್ವಚ್ಛಗೊಳಿಸುವುದನ್ನು ಮರೆಯಬೇಡಿ ಎಂದು ಎಚ್ಚರಿಸಿದರು.ಪುರಸಭಾ ಅಧ್ಯಕ್ಷೆ ಬನಶಂಕರಿ ರಘು, ಉಪಾಧ್ಯಕ್ಷೆ ರಾಣಿಕೃಷ್ಣ, ಸದಸ್ಯ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಮುಖ್ಯಶಿಕ್ಷಕರು, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.