ಕೇಂದ್ರದಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರು. ನಷ್ಟ: ಭಾಸ್ಕರ್ ರಾವ್ ಕಿದಿಯೂರು

| Published : Feb 04 2024, 01:39 AM IST

ಸಾರಾಂಶ

ಜಿಎಸ್ಟಿ ಹಾಗೂ ವಿವಿಧ ತೆರಿಗೆ ರೂಪದಲ್ಲಿ ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ವರ್ಷ 4 ಲಕ್ಷ ಕೋಟಿ ರು. ಸಂಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಕೇವಲ 50 ಸಾವಿರ ಕೋಟಿ ರು. ಮಾತ್ರ ವಾಪಸ್ ನೀಡಲಾಗುತ್ತಿದೆ ಎಂದು ಭಾಸ್ಕರ್‌ ರಾವ್‌ ವಿಶ್ಲೇಷಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ರು. ಹಣ ನಷ್ಟವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಹೇಳಿದ್ದಾರೆ.

2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿ 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆಯಾಗಿದೆ ಎಂದಿದ್ದಾರೆ.

ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಕೇಂದ್ರ ಸರ್ಕಾರದ ಅನುದಾನದಲ್ಲಿ ಸೂಕ್ತ ನ್ಯಾಯ ಸಿಗುತ್ತಿಲ್ಲ. 2018-19ರಿಂದ ಈಗಿನ ವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ ಶೇ.40ರಿಂದ ಶೇ.45 ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ ಎಂದವರು ಹೇಳಿದ್ದಾರೆ.14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ ಶೇ.4.71 ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು ಶೇ.3.64ಕ್ಕೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ನೀರಾವರಿ ಯೋಜನೆಯಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,200 ಕೋಟಿ ರು. ನೀಡುವುದಾಗಿ ಘೋಷಣೆ ಮಾಡಿದ್ದರೂ ನೀಡಿಲ್ಲ. ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರೂ ಪಾವತಿಸಿಲ್ಲ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದವರು ಆರೋಪಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತವಾಗಿವೆ. ಕೇಂದ್ರ ಸರ್ಕಾರದ ಬರ ಪರಿಹಾರ ನಿಯಮಾನುಸಾರವೇ ರಾಜ್ಯದಲ್ಲಿ ಬರ ಪ್ರದೇಶಗಳನ್ನು ಗುರುತಿಸಲಾಗಿದ್ದರೂ, ರಾಜ್ಯದ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸರ್ಕಾರನನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಸ್ಫಂದಿಸಿಲ್ಲ. ನಮ್ಮ ರಾಜ್ಯದ ಸಂಸದರು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡದೆ ಮತ ನೀಡಿದ ಜನತೆಗೆ ದ್ರೋಹ ಬಗೆದಿದ್ದಾರೆ.ಜಿಎಸ್ಟಿ ಹಾಗೂ ವಿವಿಧ ತೆರಿಗೆ ರೂಪದಲ್ಲಿ ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ವರ್ಷ 4 ಲಕ್ಷ ಕೋಟಿ ರು. ಸಂಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಕೇವಲ 50 ಸಾವಿರ ಕೋಟಿ ರು. ಮಾತ್ರ ವಾಪಸ್ ನೀಡಲಾಗುತ್ತಿದೆ. ಅಂದರೆ ಪ್ರತಿ ನೂರು ರೂಪಾಯಿಯ ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದರೆ ಅದರಲ್ಲಿ 12-13 ರೂಪಾಯಿ ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾಗಿಲ್ಲ ಎಂದು ಭಾಸ್ಕರ ರಾವ್ ಅವರು ವಿಶ್ಲೇಷಿಸಿದ್ದಾರೆ.

****