ಸಾರಾಂಶ
ಕಾಂಗ್ರೆಸ್‌ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಲೋಕಸಭೆ ಚುನಾವಣೆ-2024ರ ಹಿನ್ನೆಲೆಯಲ್ಲಿ ರಾಯಚೂರು-ಯಾದಗಿರಿ ಕ್ಷೇತ್ರಕ್ಕೆ ಐದು ಅಭ್ಯರ್ಥಿಗಳು ಗುರುವಾರ ಏಳು ನಾಮಪತ್ರ ಸಲ್ಲಿಸಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರಿಗೆ ತಮ್ಮ ಉಮೇದುವಾರಿಕೆಗಳನ್ನು ಸಲ್ಲಿಸಿದರು.
ಬಿಜೆಪಿಯಿಂದ ಎ.ಭಗವಂತರಾಯ ಹೆಸರಿನಲ್ಲಿ ಅವರ ಸೂಚಕರು ನಾಮಪತ್ರ ಸಲ್ಲಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಜಕ್ಕಲದಿನ್ನಿ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರೊಂದಿಗೆ ಬಂದು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಉಳಿದಂತೆ ಸ್ವತಂತ್ರ ಅಭ್ಯರ್ಥಿಗಳಾಗಿ ನರಸಿಂಹ ನಾಯಕ ಹಾಗೂ ಅಮರೇಶ ತಲಾ ಒಂದು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಉಮೇದುದಾರರ ಸೂಚಕರು ಉಪಸ್ಥಿತರಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಚಿವರಾದ ಎನ್.ಎಸ್.ಬೋಸರಾಜು, ಶರಣಬಸಪ್ಪ ದರ್ಶನಾಪುರ, ಜಿಲ್ಲಾಧ್ಯಕ್ಷ ಬಸವರಾಜ್ ಪಾಟೀಲ್ ಇಟಗಿ, ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಕೆ.ಶಾಂತಪ್ಪ,ಎ.ವಸಂತಕುಮಾರ ಸೇರಿದಂತೆ ಅನೇಕರು ಇದ್ದರು. ಬಿಜೆಪಿ ಅಭ್ಯರ್ಥಿ ಪರವಾಗಿ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ, ವೆಂಕಟರಾವ್ ನಾಡಗೌಡ, ಎಂಎಲ್‌ಸಿ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ವಿರುಪಾಕ್ಷಿ ಎಂ. ಸೇರಿ ಇತರರಿದ್ದರು.