ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ 7 ಸ್ಥಳಗಳ ಗುರುತು

| Published : Aug 06 2024, 01:35 AM IST / Updated: Aug 06 2024, 10:09 AM IST

ಸಾರಾಂಶ

ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

 ಬೆಂಗಳೂರು :  ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆ ಬಗ್ಗೆ ಚರ್ಚಿಸಲಾಯಿತು.

ನೂತನ ವಿಮಾನ ನಿಲ್ದಾಣಕ್ಕೆ ಐಡೆಕ್‌ ಸಂಸ್ಥೆಯು 9 ಜಾಗಗಳನ್ನು ಗುರುತಿಸಿದ್ದು, ಈ ಪೈಕಿ ಎರಡು ಸ್ಥಳಗಳನ್ನು ತಾಂತ್ರಿಕ ಕಾರಣಗಳಿಂದ ಕೈ ಬಿಡಲಾಗಿದೆ. ಉಳಿದ ಸ್ಥಳಗಳ ಮಾಹಿತಿಯೊಂದಿಗೆ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇದಕ್ಕೂ ಮೊದಲು ಮಂಗಳವಾರ ಅಥವಾ ಬುಧವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಲು ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಸಭೆ ಬಳಿಕ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ವಿಮಾನ ನಿಲ್ದಾಣಕ್ಕೆ ಯಾವ ಜಾಗ ಸೂಕ್ತ ಎಂಬುದನ್ನು ಬೆಂಗಳೂರು ಮತ್ತು ಕರ್ನಾಟಕದ ಹಿತದೃಷ್ಟಿಯಿಂದ ತೀರ್ಮಾನಿಸಲಾಗುವುದು. ಇದರಲ್ಲಿ ಯಾವುದೇ ರಾಜಕೀಯ ಇರುವುದಿಲ್ಲ. ಪ್ರಾಧಿಕಾರವು 15 ಮಾನದಂಡಗಳನ್ನು ಇಟ್ಟುಕೊಂಡಿದ್ದು, ಅದರಂತೆ ಅಂತಿಮ ಸ್ಥಳ ನಿರ್ಧಾರವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್‌ ಮಾತನಾಡಿ, ನೂತನ ವಿಮಾನ ನಿಲ್ದಾಣದ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಈಗಾಗಲೇ ಹತ್ತಕ್ಕೂ ಹೆಚ್ಚು ಸಭೆ ನಡೆಸಿದ್ದಾರೆ. ಬೆಂಗಳೂರು ನಗರದ ಅಭಿವೃದ್ಧಿ, ಅವಕಾಶ ಮತ್ತು ಪ್ರಯಾಣಿಕರು ಹಾಗೂ ಸರಕು ಸಾಗಣೆ ಒತ್ತಡ ಪರಿಗಣಿಸಿ, ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿ.ಮೀ. ವ್ಯಾಪ್ತಿಯಲ್ಲಿ 2033ರವರೆಗೆ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸುವಂತಿಲ್ಲ ಎಂದು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರ ನಡುವೆ ನಿರೀಕ್ಷೆಗಿಂತ ಹೆಚ್ಚು ಪ್ರಯಾಣಿಕರ ದಟ್ಟಣೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಉಂಟಾಗಿದ್ದು, ವಾರ್ಷಿಕ 3.70 ಕೋಟಿ ಪ್ರಯಾಣಿಕರು ಈ ವಿಮಾನ ನಿಲ್ದಾಣ ಬಳಕೆ ಮಾಡುತ್ತಿದ್ದಾರೆ. ಈ ಪೈಕಿ 47 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಇದ್ದು, ವಿಶ್ವದ 108 ಕಡೆಗಳಿಗೆ ವಿಮಾನ ಹಾರಾಟ ಇದೆ. ಈ ಪ್ರಯಾಣಿಕರ ಪ್ರಮಾಣ ಪ್ರತಿ ವರ್ಷ ಶೇಕಡ 10ರಷ್ಟು ಹೆಚ್ಚಾಗುತ್ತಿದ್ದು, ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯ ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಸಭೆಯಲ್ಲಿ ಅಡ್ವೋಕೆಟ್ ಜನರಲ್ ಶಶಿಕಿರಣ ಶೆಟ್ಟಿ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಹಾಜರಿದ್ದರು.

ಏಳು ಸ್ಥಳಗಳು ಯಾವುವು?

ತುಮಕೂರು ಬಳಿ, ಕನಕಪುರ ರಸ್ತೆ, ಮೈಸೂರು ರಸ್ತೆ, ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ಸರ್ಜಾಪುರ ಹಾಗೂ ಕುಣಿಗಲ್‌-ಮಾಗಡಿ ನಡುವೆ ಸೇರಿ ಏಳು ಸ್ಥಳಗಳನ್ನು ಪಟ್ಟಿ ಮಾಡಲಾಗಿದೆ. ಈ ಭಾಗದಲ್ಲಿ 4,500ರಿಂದ 5,000 ಎಕರೆ ಜಾಗ ಅಗತ್ಯವಿದೆ. ಈ ಪೈಕಿ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಿದರೆ ಸರ್ಜಾಪುರ ಹಾಗೂ ಕನಕಪುರ ರಸ್ತೆಗಳಿಗೆ ಆದ್ಯತೆ ನೀಡಬಹುದು. ವಿಮಾನ ನಿಲ್ದಾಣಗಳ ನಡುವಿನ ಸಂಪರ್ಕಕ್ಕೆ ಆದ್ಯತೆ ನೀಡುವುದಾದರೆ ದೊಡ್ಡಬಳ್ಳಾಪುರ, ದಾಬಸ್‌ಪೇಟೆ, ತುಮಕೂರು ಭಾಗಗಳಿಗೆ ಆದ್ಯತೆ ನೀಡಬಹುದು. ಅಂತಿಮ ಆಯ್ಕೆ ಬಳಿಕ ಭೂಸ್ವಾಧೀನ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.