೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ೭ ಇತ್ಯರ್ಥ-ಟಿ. ಶ್ಯಾಮ ಭಟ್‌

| Published : Aug 10 2024, 01:44 AM IST

೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ೭ ಇತ್ಯರ್ಥ-ಟಿ. ಶ್ಯಾಮ ಭಟ್‌
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ದಾಖಲಾದ ಒಟ್ಟು ೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಪೈಕಿ ೭ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಬಾಕಿ ಇರುವ ಒಂದು ಪ್ರಕರಣವನ್ನು ಶೀಘ್ರವೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲಾಗುವುದು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಹೇಳಿದರು.

ಹಾವೇರಿ: ಜಿಲ್ಲೆಯಲ್ಲಿ ದಾಖಲಾದ ಒಟ್ಟು ೮ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಪೈಕಿ ೭ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಬಾಕಿ ಇರುವ ಒಂದು ಪ್ರಕರಣವನ್ನು ಶೀಘ್ರವೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲಾಗುವುದು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ. ಶ್ಯಾಮ ಭಟ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಆಯೋಗಕ್ಕೆ ದಂಡನೆ ಹಾಕಲು ಮತ್ತು ನೇರವಾಗಿ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ. ಆದರೆ, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಿ, ತನ್ಮೂಲಕ ಕ್ರಮ ಜರುಗಿಸಲು ಸಾಧ್ಯವಿದೆ ಎಂದರು.

೨೦೨೩ರಿಂದ ರಾಜ್ಯ ಮಾನವ ಹಕ್ಕುಗಳ ಆಯೋಗ ಬೆಂಗಳೂರು ಕೇಂದ್ರಿತವಾಗಿ ಕೆಲಸ ಮಾಡದೇ ಜನಪರ ನಿಲುವುಗಳೊಂದಿಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಜನರ ಸಂರಕ್ಷಣೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ತಡೆಗೆ ಮುಂದಾಗಿದೆ. ಜನರ ಬದುಕಿನ ಮೌಲ್ಯಗಳನ್ನು ಗೌರವಿಸುವ ಮತ್ತು ತೊಂದರೆಗೆ ಒಳಗಾದ ಸಂದರ್ಭದಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಪ್ರಸ್ತುತ ಆಯೋಗ ರಾಜ್ಯದ ೧೨ ಜಿಲ್ಲೆಗಳಿಗೆ ಭೇಟಿ ನೀಡಿದ್ದು, ಸದ್ಯ ಹಾವೇರಿ ಜಿಲ್ಲೆಗೆ ಆಗಮಿಸಿದೆ. ದೂರುದಾರರು, ಸಾರ್ವಜನಿಕರು ಮತ್ತು ಅಧಿಕಾರಿಗಳು ಆಯೋಗದ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಓಡಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳ ನಿವಾರಣೆಗೆ ಮುಂದಾಗಲಿದೆ. ಆಯೋಗಕ್ಕೆ ತೊಂದರೆಗೆ ಒಳಗಾದವರೇ ದೂರು ನೀಡಬೇಕು ಎಂದೇನಿಲ್ಲ, ಮಾಧ್ಯಮ ವರದಿ ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಲೂ ಅವಕಾಶವಿದೆ ಎಂದರು.

ಆಯೋಗದ ನ್ಯಾಯಿಕ ಸದಸ್ಯ ಹಾಗೂ ನಿವೃತ್ತ ನ್ಯಾಯಾಧೀಶ ಎಸ್.ಕೆ. ವಂಟಗೋಡಿ ಮಾತನಾಡಿ, ದಿನಂಪ್ರತಿ ಆಯೋಗದ ಮುಂದೆ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ೨-೩ ದೂರುಗಳು ದಾಖಲಾಗುತ್ತಿವೆ. ಕಳೆದ ಎರಡು ವರ್ಷಗಳ ಹಿಂದೆ ನಾವು ಅಧಿಕಾರ ವಹಿಸಿಕೊಂಡಾಗ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಸುಮಾರು ೫೫೦೦ ಪ್ರಕರಣ ಇತ್ಯರ್ಥಗೊಂಡು, ಪ್ರಸ್ತುತ ೨೯೧೭ ಮಾತ್ರ ಬಾಕಿ ಇವೆ. ಇವುಗಳಲ್ಲಿ ರಾಜ್ಯಾದ್ಯಂತ ಸುಮಾರು ೧೦೮ ಸುಮೋಟೋ ಪ್ರಕರಣಗಳಿವೆ ಎಂದು ತಿಳಿಸಿದರು.

ಈ ವೇಳೆ ಆಯೋಗದ ಕಾರ್ಯದರ್ಶಿ ದಿನೇಶ ಸಂಪತ್‌ರಾಜ್, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ಅಕ್ಷಯ ಶ್ರೀಧರ, ಎಸ್ಪಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ, ಉಪವಿಭಾಗಾಧಿಕಾರಿ ಚನ್ನಪ್ಪ ಇದ್ದರು.ಜಿಲ್ಲಾ ಕೇಂದ್ರದಲ್ಲಿ ಪುನರ್ವಸತಿ ಕೇಂದ್ರ ನಿರ್ಮಾಣಕ್ಕೆ ಒಟ್ಟು ಐದು ಎಕರೆ ಜಮೀನು ಮತ್ತು ₹೧೦ಕೋಟಿ ಅನುದಾನ ಮಂಜೂರಾಗಿದ್ದು, ಅದರ ಇತರ ಎಲ್ಲ ತಾಂತ್ರಿಕ ಕಾರ್ಯಗಳು ಪ್ರಗತಿಯಲ್ಲಿವೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದು ಕಾರ್ಯಕ್ಕೆ ವೇಗ ನೀಡುವ ಕೆಲಸವನ್ನು ಆಯೋಗ ಮಾಡಲಿದೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ. ಶ್ಯಾಮಭಟ್‌ ಹೇಳಿದರು.