71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ

| Published : Nov 16 2024, 12:31 AM IST

ಸಾರಾಂಶ

ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪಂಡಿತ ಜವಹರಲಾಲ್ ನೆಹರು ಜನ್ಮದಿನದ ನಿಮಿತ್ತ ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.

ಇಲ್ಲಿನ ನವನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸಹಕಾರ ಮಂಡಳ, ಅಪೆಕ್ಸ್ ಬ್ಯಾಂಕ್, ವಿಜಯಪುರ ಡಿಸಿಸಿ ಬ್ಯಾಂಕ್ ಸೇರಿದಂತೆ ಜಿಲ್ಲೆಯ ಸಹಕಾರ ಸಂಘಟನೆಗಳು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ ಹಾಗೂ ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವರು ಎಂದರು.

ಶಾಸಕ ಎಚ್.ವೈ.ಮೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾ ಸಚಿವ ಆರ್.ಬಿ.ತಿಮ್ಮಾಪುರ ಸಹಕಾರ ವಾರಪತ್ರಿಕೆ ಬಿಡುಗಡೆ ಮಾಡಲಿದ್ದು, ಎಂ.ಬಿ.ಪಾಟೀಲ ವಿವಿಧ ಇಲಾಖೆಗಳ ಹಾಗೂ ಸಹಕಾರ ಸಂಸ್ಥೆಗಳ ಮಳಿಗೆಗಳ ಉದ್ಘಾಟನೆ ನೆರವೇರಿಸುವರು. ಸಚಿವ ಶಿವಾನಂದ ಪಾಟೀಲ ಅವರು ರೈತರಿಗೆ ಕೃಷಿ ಸಾಲ ವಿತರಣೆ ಮಾಡಲಿದ್ದಾರೆ ಹಾಗೂ ಶಾಸಕ ಜಿ.ಟಿ.ದೇವೆಗೌಡ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ತಿಳಿಸಿದರು.

ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯರಾದ ನಾರಾಯಣಸಾ ಭಾಂಡಗೆ ಹಾಗೂ ಡಾ. ಸುಧಾ ಮೂರ್ತಿ, ಶಾಸಕರಾದ ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ ಹಾಗೂ ಯಶವಂತರಾಯಗೌಡ ಪಾಟೀಲ, ವಿಪ ಸದಸ್ಯ ಹನಮಂತ ನಿರಾಣಿ ಸೇರಿದಂತೆ ಅವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರನ್ನು ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯಿಂದ ಅಂದಾಜು 18 ರಿಂದ 20 ಸಾವಿರ ಜನರು ಪಾಲ್ಗೊಳ್ಳಲಿದ್ದು, ಎಲ್ಲ ಸಿದ್ಧತೆ ಮಾಡಲಾಗಿದೆ ಎಂದರು. ಶಾಸಕ ಎಚ್.ವೈ.ಮೇಟಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ ಸೇರಿ ಇತರರಿದ್ದರು.

ಜಿಲ್ಲೆಯ ಮೂವರಿಗೆ ಸಹಕಾರ ರತ್ನ ಪ್ರಶಸ್ತಿ

ರಾಜ್ಯದಲ್ಲಿ ಒಟ್ಟು 72 ಜನರಿಗೆ ಈ ಬಾರಿ ಸಹಕಾರಿ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಅದರಲ್ಲಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಸುಭಾಷ ಮೆಳ್ಳಿ ಹಾಗೂ ಸಂಗಣ್ಣ ಹಂಡಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಜತೆಗೆ ಜಿಲ್ಲೆಯ ಅತ್ಯುತ್ತಮ 5 ಸಹಕಾರಿ ಸಂಘಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ರಾಷ್ಟ್ರ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಎಂಬ ಪ್ರಶಸ್ತಿ ಪಡೆದ ಸಾವಳಗಿ ಪಿಕೆಪಿಎಸ್ ಅವರನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ತಿಳಿಸಿದರು.