ಸಾರಾಂಶ
ವಸತಿ ನಿಲಯದಲ್ಲಿ ಉಪಹಾರ ಸೇವಿಸಿದ 72 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಶ್ರೀ ಮೋರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ವಸತಿ ನಿಲಯದಲ್ಲಿ ಉಪಹಾರ ಸೇವಿಸಿದ 72 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಶ್ರೀ ಮೋರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಅಲ್ಪಸಂಖ್ಯಾತರ ಇಲಾಖೆಗೆ ಸೇರಿದ ಶ್ರೀ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ಪರಿಣಾಮವಾಗಿ 72ಕ್ಕಿಂತ ಹೆಚ್ಚು ಮಕ್ಕಳು ಹೊಟ್ಟೆನೋವು ಹಾಗೂ ವಾಂತಿ ಭೇದಿಯಿಂದ ಬಳಲಿದರು. ನಂತರ ತಕ್ಷಣವೇ ಮಕ್ಕಳನ್ನು ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಮಕ್ಕಳ ಆರೋಗ್ಯ ಸ್ಥಿರವಾಗಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಡಿಎಚ್ ಈ ಡಾ.ಎಸ್.ಎಸ್.ಗಡೇದ ತಿಳಿಸಿದ್ದಾರೆ.ಬೆಳಗ್ಗೆ ಉಪಾಹಾರವಾಗಿ ಉಪ್ಪಿಟ್ಟು ಸೇವಿಸಿದರ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಆಸ್ಪತ್ರೆಗೆ ಡಿಡಿಪಿಐ ಸೀತಾರಾಮು ಆರ್.ಎಸ್.,ಟಿಎಚ್ಒ ಡಾ.ಸುಕಮಾರ ಬಾಗಾಯಿ ಭೇಟಿ ಮಕ್ಕಳ ಆರೋಗ್ಯ ವಿಚಾರಿಸಿದರು. ಮೋರಾರ್ಜಿ ದೇಸಾಯಿ ವಸತಿ ನಿಲಯದ ಸಿಬ್ಬಂದಿ ಬೇಜವಾಬ್ದಾರಿಯಿಂದಾಗಿ ಈ ಘಟನೆ ನಡೆದಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಆದರೆ, ತನಿಖೆಯಿಂದಷ್ಟೇ ನಿಖರವಾದ ಮಾಹಿತಿ ಲಭ್ಯವಾಗಲಿದೆ.ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಭೇಟಿ:
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಭೇಟಿ ನೀಡಿ ವೈದ್ಯರ ಜೊತೆ ಚರ್ಚಿಸಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.