ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ನಮ್ಮ ದೇಶ ಪ್ರೇಮ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಷ್ಟೇ ಸೀಮಿತಗೊಳ್ಳಬಾರದು. ದೇಶ ಪ್ರೇಮ ನಮ್ಮಲ್ಲಿ ಪ್ರತಿದಿನ, ಪ್ರತಿಕ್ಷಣ ರಕ್ತಗತವಾಗಿರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.ನಗರದ ಬನ್ನಿಮಂಟಪ ಪಂಜಿನ ಕವಾಯಿತು ಮೈದಾನದಲ್ಲಿ ಜಿಲ್ಲಾಡಳಿತವು ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ತೆರೆದ ಜೀಪಿನಲ್ಲಿ ತೆರಳಿ ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಭಾರತ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ, ಸೌಹಾರ್ದತೆ, ಭಾತೃತ್ವದ ಅಡಿಗಲ್ಲಿನ ಮೇಲೆ ನಮ್ಮ ಸಮಾಜ ನಿರ್ಮಾಣವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಹಿರಿಯರನ್ನು ಕೃತಜ್ಞತೆಯಿಂದ ನೆನಪು ಮಾಡಿಕೊಳ್ಳುವ ಕರ್ತವ್ಯದ ದಿನವಿದು ಎಂದು ಅವರು ಹೇಳಿದರು.ತ್ಯಾಗ, ಬಲಿದಾನ, ಹೋರಾಟದ ಮೂಲಕ ಗುಲಾಮಗಿರಿಯ ಸಂಕೋಲೆಯಿoದ ದೇಶವನ್ನು ಬಿಡುಗಡೆಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನಾಡಿನ ಜನತೆಯ ಪರವಾಗಿ ನನ್ನ ಗೌರವದ ನಮನಗಳು. ಇಂದು ನಾವು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರು ಮತ್ತು ಯೋಧರ ತ್ಯಾಗವನ್ನು ಸ್ಮರಿಸಿ ಗೌರವ ಸಲ್ಲಿಸುವ ದಿನವಾಗಿದೆ. ನಾವು ಮತ್ತು ನಮ್ಮ ಮುಂದಿನ ಪೀಳಿಗೆಗಳು ವಿದೇಶಿ ವಸಾಹತುಶಾಹಿ ದಬ್ಬಾಳಿಕೆಯ ನೊಗದಿಂದ ಮುಕ್ತವಾದ ಸ್ವಾತಂತ್ರ್ಯದ ಗಾಳಿಯನ್ನು ಉಸಿರಾಡಲು ಅವರು ತಮ್ಮ ಬೆವರು ಮತ್ತು ರಕ್ತವನ್ನು ತ್ಯಾಗ ಮಾಡಿದ್ದಾರೆ ಎಂದರು.
ನಮಗೆ ಸ್ವಾತಂತ್ರ್ಯ ತಂದು ಕೊಡಲು ಹೋರಾಡಿದ ಮಹಾತ್ಮ ಗಾಂಧೀಜಿ, ಜವಾಹರ್ ಲಾಲ್ ನೆಹರು, ಸರ್ದಾರ್ ವಲ್ಲಭಾಯಿ ಪಟೇಲ್, ಗೋಪಾಲಕೃಷ್ಣ ಗೋಖಲೆ, ಲೋಕಮಾನ್ಯ ತಿಲಕ್, ನೇತಾಜಿ ಸುಭಾಷ್ ಚಂದ್ರಬೋಸ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಡಾ.ಬಿ.ಆರ್. ಅಂಬೇಡ್ಕರ್ ಅವರು ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾದ ಸಮಸ್ತರಿಗೂ ಸಾಷ್ಟಾಂಗ ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದರು.ರಾಷ್ಟ್ರ ಧ್ವಜಾರೋಹಣ ವೇಳೆ ಪೊಲೀಸ್ ಬ್ಯಾಂಡ್ ನವರು ರಾಷ್ಟ್ರಗೀತೆ ನುಡಿಸಿದರು. ಬಳಿಕ ಅಮ್ಮ ರಾಮಚಂದ್ರ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು.
ಶಾಸಕ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ತು ಸದಸ್ಯ ಸಿ.ಎನ್. ಮಂಜೇಗೌಡ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಪ್ರಾದೇಶಿಕ ಆಯುಕ್ತ ಡಿ.ಎಸ್. ರಮೇಶ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಡಿಐಜಿ ಡಾ.ಎಂ.ಬಿ. ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜ್, ಡಿಸಿಪಿ ಆರ್.ಎನ್. ಬಿಂದು ಮಣಿ, ಕೆ.ಎಸ್. ಸುಂದರ್ ರಾಜ್, ಹೆಚ್ಚುವರಿ ಎಸ್ಪಿ ಸಿ. ಮಲ್ಲಿಕ್ ಮೊದಲಾದವರು ಇದ್ದರು. ಆಕಾಶವಾಣಿ ಮಂಜುನಾಥ್, ಕೆಪಿಎ ಪೇದೆ ನಂದಿನಿ ಮತ್ತು ಕೆಎಸ್ಆರ್ ಪಿ ಪೇದೆ ಕುಮಾರಸ್ವಾಮಿ ನಿರೂಪಿಸಿದರು.----
ಕೋಟ್...ನಮ್ಮದು ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ ಬೆಸೆಯುವ ಮತ್ತು ಸರ್ವರಿಗೂ ಸಮಪಾಲು- ಸಮಬಾಳು ನೀಡುವ, ನಾಡಿನ ಪ್ರತಿಯೊಬ್ಬ ಪ್ರಜೆಯ ಜೀವನಮಟ್ಟ ಸುಧಾರಣೆಯನ್ನು ಗುರಿಯಾಗಿಟ್ಟುಕೊಂಡ ಸರ್ವೋದಯ ತತ್ವದ ಅಭಿವೃದ್ಧಿಯಾಗಿದೆ.
- ಡಾ.ಎಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ