ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಸ್ಕೂಲ್‌ ಪ್ರಾರಂಭ

| Published : Nov 09 2025, 03:30 AM IST

ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಸ್ಕೂಲ್‌ ಪ್ರಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

46 ಸಾವಿರ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಶಿಕ್ಷಕರು ರಾತ್ರಿ ಸಮಯದಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸಲು ಹಾಗು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ಒದಗಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾನುವಾರದಂದು ಇಲ್ಲಿನ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಪ್ರಾರಂಭಿಸಲಾಗುವುದು. ಈ ನಿಟ್ಟಿನಲ್ಲಿ 18 ಸಾವಿರ ಶಿಕ್ಷಕರ ಆಯ್ಕೆ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 51 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು. ಈ ಹಿಂದೆ ಕಳೆದ 8 ವರ್ಷಗಳಲ್ಲಿ ಕೇವಲ 308 ಶಾಲೆಗಳನ್ನು ಮಾತ್ರ ಆರಂಭಿಸಲಾಗಿತ್ತು ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ವಿದ್ಯಾಭ್ಯಾಸ ಮೊಟುಕುಗೊಳಿಸಬಾರದೆಂಬ ಸದುದ್ದೇಶದಿಂದ ಒಟ್ಟು ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.79.89 ತಮ್ಮ ಸ್ವಂತ ಪರಿಶ್ರಮದ ಮೇಲೆ ಉತ್ತೀರ್ಣರಾಗಿದ್ದಾರೆ. ಅಲ್ಲದೇ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಹೇಳಿದರು.

ಈ ಹಿಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಶೇ.20 ರಷ್ಟು ನಕಲು ಮಾಡುತ್ತಿದ್ದರು ಎಂಬ ವರದಿಯಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಪರೀಕ್ಷೆಯನ್ನು ಬರೆಯುವಂತಾಗಿದೆ ಎಂದು ಹೇಳಿದರು.

ರಾಜ್ಯದ ಮೂವರು ಮುಖ್ಯಮಂತ್ರಿಗಳಾದ ಆರ್.ಗುಂಡೂರಾವ್(ಬೇಳೂರು ಶಾಲೆ ಹಳೆ ವಿದ್ಯಾರ್ಥಿ), ಎಸ್. ಬಂಗಾರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಶಾಲೆಗಳಲ್ಲಿ ಓದಿ ಉನ್ನತ ಸ್ಥಾನಕ್ಕೆ ಏರಿದವರು. ಆ ಸಂದರ್ಭ ಸರ್ಕಾರಿ ಶಾಲೆಗಳೇ ಇಲ್ಲದೇ ಹೋಗಿದ್ದರೆ ಇವರುಗಳ ಭವಿಷ್ಯ ಮೊಟಕುಗೊಳ್ಳುವ ಸಾಧ್ಯತೆ ಇತ್ತು ಎಂದು ಸರ್ಕಾರಿ ಶಾಲೆಯ ಮಹತ್ವ ಕುರಿತು ತಿಳಿಸಿದರು.

ಶತಮಾನೋತ್ಸವದ ಸವಿ ನೆನಪಿಗಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ಉತ್ತಮ ಯೋಜನೆ ರೂಪಿಸಲಾಗುವುದು ಎಂದು ಈ ಸಂದರ್ಭ ಸಚಿವರು ಭರವಸೆ ನೀಡಿದರು. ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ಕಟ್ಟುವ ನಿಜವಾದ ಅಡಿಪಾಯಗಳಾಗಿವೆ. ಬೇಳೂರು ಶಾಲೆಯು ಶತಮಾನದಿಂದಲೂ ಈ ದಿಸೆಯಲ್ಲಿ ಮಾಡಿದ ಸೇವೆ ಶ್ಲಾಘನೀಯ ಎಂದು ಹೇಳಿದರು. ಬೇಳೂರು ಶಾಲೆಯಂತಹ ಹಳೆಯ ಸಂಸ್ಥೆಗಳು ಹೊಸ ಪೀಳಿಗೆಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪ್ರಸಾದ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಜಿ.ಎಸ್.ಪ್ರಭುದೇವ್, ಗೌರವ ಸಲಹೆಗಾರ ಕೆ.ಡಿ.ಕುಮಾರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಪಿ.ಉಲ್ಲಾಸ್, ಬೇಳೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸುದರ್ಶನ್, ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗಣ್ಯರಾದ ಡಾ.ಚಂದ್ರಮೌಳಿ, ಕೆ.ಪಿ.ಚಂದ್ರಕಲಾ, ಡಿಡಿಪಿಯು ಚಿದಾನಂದ ಮೂರ್ತಿ, ಡಿಡಿಪಿಐ ಬಸವರಾಜು, ಡಾ.ವೇಣುಗೋಪಾಲ್, ತಹಸೀಲ್ದಾರ್ ಕೃಷ್ಣಮೂರ್ತಿ, ಬಿಇಒ ಕೃಷ್ಣಪ್ಪ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಸತೀಶ್ ಮತ್ತಿತರರು ಇದ್ದರು.