ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅನ್ಯಕ್ರಾಂತ ಆಗದೆ ಮನೆಗಳನ್ನು ಕಟ್ಟಿಕೊಂಡಿದ್ದರೆ ಅಂತಹ ಮನೆಗಳಿಗೆ ಎ ಆ್ಯಂಡ್ ಬಿ ಖಾತೆ ಮಾಡಿಕೊಡಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಹೇಳಿದ್ದಾರೆ.ಮಂಗಳವಾರ ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಜನರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವುಗಳು ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಆಗಿಲ್ಲ. ಕೆಲವರು ಒಂದು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು 2-3 ಅಂತಸ್ತಿನ ಕಟ್ಟಡ ಕಟ್ಟುತ್ತಿದ್ದಾರೆ. ಆದರೆ, ಸ್ಥಳೀಯ ಸಂಸ್ಥೆಗಳಿಗೆ ಅವುಗಳಿಂದ ಆದಾಯ ಬರುತ್ತಿಲ್ಲ ಎಂದರು.
ಅಂತಹ ಮನೆಗಳು ಸ್ಥಳೀಯ ಸಂಸ್ಥೆಗಳಿಂದ ಎಲ್ಲಾ ರೀತಿಯ ಮೂಲಭೂತ ಸವಲತ್ತುಗಳನ್ನು ಪಡೆದುಕೊಳ್ಳುತ್ತಿವೆ. ಆದರೆ, ಅವುಗಳಿಂದ ಸಂಸ್ಥೆಗಳಿಗೆ ತೆರಿಗೆ ಬರುತ್ತಿಲ್ಲ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಎ ಆ್ಯಂಡ್ ಬಿ ಖಾತೆ ಮಾಡಿಕೊಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಜತೆಗೆ ಜನರಿಗೂ ಅನುಕೂಲವಾಗಲಿದೆ ಎಂದ ಸಚಿವರು, ಸದ್ಯದಲ್ಲೇ ಇದು, ಆದೇಶವಾಗಿ ಪ್ರಕಟಗೊಳ್ಳಲಿದೆ ಎಂದು ಹೇಳಿದರು.ಸ್ಥಳೀಯ ನಗರ ಸಂಸ್ಥೆಗಳಲ್ಲಿ ಯಾವುದೇ ಕಾಮಗಾರಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಬಳಸಬಾರದೆಂದು ಟೆಂಡರ್‌ನ ಆದೇಶದಲ್ಲಿ ಗುತ್ತಿಗೆದಾರರಿಗೆ ತಿಳಿಸಿ ಕೊಡಲಾಗುತ್ತದೆ. ಆದರೂ ಕೂಡ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಮುಗಿಸುವ ಉದ್ದೇಶದಿಂದ ಜೆಸಿಬಿ ಬಳಸಿ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ರಸ್ತೆಗಳಿಗೆ ತುಂಬಾ ಹಾನಿಯಾಗುತ್ತಿದೆ. ಅಂತಹ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಚಿಕ್ಕಮಗಳೂರು ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ನಗರೋತ್ಥಾನ ಕಾಮಗಾರಿಯ ಟೆಂಡರ್ ಆಗಿದೆ. ಆದರೆ, ಕಾಮಗಾರಿ ಆರಂಭವಾಗಿಲ್ಲ. ಅದ್ದರಿಂದ ಸಂಬಂಧಪಟ್ಟ ಗುತ್ತಿಗೆದಾರರಿಗೆ ದಂಡ ವಿಧಿಸಬೇಕು. ಅವರಿಗೆ ಕೊಟ್ಟಿರುವ ಟೆಂಡರ್‌ವನ್ನು ರದ್ದುಪಡಿಸಿ ಹೊಸದಾಗಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.
ಚಿಕ್ಕಮಗಳೂರು ನಗರದಲ್ಲಿ ನಡೆದ ಒಳ ಚರಂಡಿ ನಿರ್ಮಾಣ ಹಾಗೂ ಅಮೃತ್ ಯೋಜನೆ ಕಾಮಗಾರಿ ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂಬ ದೂರುಗಳು ಇದ್ದು, ಈ ಸಂಬಂಧ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆಯನ್ನು ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.ಮನೆ ಕಂದಾಯ ಸಂಗ್ರಹಕ್ಕೆ ಹೋಲಿಕೆ ಮಾಡಿದರೆ ನಿರೀಕ್ಷಿತ ಮಟ್ಟದಲ್ಲಿ ನೀರಿನ ತೆರಿಗೆ ಸಂಗ್ರಹ ಆಗುತ್ತಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಯವರು ನಗರ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಯನ್ನು ಕರೆದು ಸೂಕ್ತವಾದ ನಿರ್ದೇಶನ ನೀಡಬೇಕು ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಸಭೆಯಲ್ಲಿ ಪ್ರಸ್ತಾಪಿಸಿದರು.ಪೌರಾಡಳಿತ ಇಲಾಖೆಯ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟೆ ಮಾತನಾಡಿ, ನೀರಿನ ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದ್ದು, ಈ ಜವಬ್ದಾರಿಯನ್ನು ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡಲು ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಅದು ಆದೇಶವಾಗಿ ಹೊರ ಬರಲಿದೆ ಎಂದು ಹೇಳಿದರು.
ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ವಾಣಿಜ್ಯ ಪರವಾನಗಿ ಪಡೆಯಲು ವಿಧಿಸಿರುವ ಶುಲ್ಕ ದುಬಾರಿಯಾಗಿದೆ. ಇದರಿಂದ ವರ್ತಕರಿಗೆ ತುಂಬಾ ತೊಂದರೆಯಾಗಿದೆ. ಪುನರ್ ಪರಿಶೀಲನೆ ಮಾಡಿ ಕಡಿತಗೊಳಿಸಬೇಕು ಎಂದು ತಿಳಿಸಿದರು.ಚಿಕ್ಕಮಗಳೂರು ನಗರದಲ್ಲಿ ರಸ್ತೆಗಳು ಗುಂಡಿ ಬಿದ್ದು ಹಾಳಾಗಿದ್ದು, ರಸ್ತೆಗಳ ನಿರ್ಮಾಣಕ್ಕೆ ₹10 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಾಸಕರು, ಸಚಿವರಿಗೆ ಮನವಿ ಸಲ್ಲಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಎಚ್. ಶ್ರೀನಿವಾಸ್, ಆನಂದ್, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಇದ್ದರು.