ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ದಾರ್ಶನಿಕರು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟು, ಆ ಮೂಲಕ ಮಾನವ ಜನಾಂಗಕ್ಕೆ ವಿಶೇಷವಾದ ಸೇವೆಯನ್ನು ಸಲ್ಲಿಸಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಈ ಮಾರ್ಗದಲ್ಲಿ ನಡೆದರೆ ಈ ಮೂಲಕ ಉತ್ತಮ ರಾಷ್ಟ್ರ, ನಾಡುನುಡಿಯ ನಿರ್ಮಾಣ ಸಾಧ್ಯ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು ಹೇಳಿದರು.ಅವರು ಶುಕ್ರವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಶ್ರೀ ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಅಗ್ನಿ ಬನ್ನಿರಾಯರ ಸೇವೆಗಳನ್ನು ನೆನೆಯುವ ಉದ್ದೇಶದಿಂದ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬಂದಿದ್ದು, ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಮಾರ್ಗವನ್ನು ಸೂಚಿಸಿದವರು. ಇಂತಹ ವೀರ ಪುರುಷರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ಅಗ್ನಿ ಬನ್ನಿರಾಯರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ತಿಳಿಯುವುದರ ಜೊತೆಗೆ ಅವರು ನೀಡಿದ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಮಹಾಪುರುಷರ ವ್ಯಕ್ತಿತ್ವ ಹಾಗೂ ಅವರ ತತ್ವ ಸಿದ್ದಾಂತಗಳ ಅರಿವು ಹೊಂದುವುದು ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಪ್ರಜ್ಞಾವಂತರಾಗಿ ಮಹಾನೀಯರ ಕುರಿತು ಹೆಚ್ಚಿನ ವಿಚಾರಗಳನ್ನು ಅರಿಯುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ, ಶ್ರೀ ಅಗ್ನಿ ಬನ್ನಿರಾಯರ ಕುರಿತು ವಿಶೇಷ ಉಪನ್ಯಾಸ ನೀಡಿದರು. ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ, ಉಪಸಭಾಪತಿ ಡಾ. ಅಶೋಕ್ ವೈ.ಜಿ., ಮಾಜಿ ಕಾರ್ಯದರ್ಶಿ ಕೆ.ಬಾಲಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ವರ್ಷಾ ಕೋಟ್ಯಾನ್ ನಿರೂಪಿಸಿ, ವಂದಿಸಿದರು.