ಮಲೇರಿಯಾ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ

| Published : May 29 2024, 12:45 AM IST

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮ ಮಂಗಳವಾರ ನಡೆಯಿತು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮ ಮಂಗಳವಾರ ನಡೆಯಿತು.

ಹೆಚ್ಚು ಸಮಾನತೆಯ ಜಗತ್ತಿಗೆ, ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ ಎಂಬ ಘೋಷವಾಕ್ಯದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಮಲೇರಿಯಾ ದಿನದ ಅರಿವು ಮೂಡಿಸುವ ಸಲುವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಿಂದ ನಗರದ ಪ್ರವಾಸಿ ಮಂದಿರ ವೃತ್ತದ ವರೆಗೆ ಜಾಥಾವನ್ನು ಮಾಡಲಾಯಿತು. ಬಳಿಕ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ವೃತ್ತದಲ್ಲಿ ಮಾನವ ನಿರ್ಮಿತ ಸರಪಳಿ ರಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಪ್ರಮುಖರು, ಜಿಲ್ಲಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಘೀ, ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಮುಂಜಾಗ್ರತೆಯಾಗಿ ಕ್ರಮ ಕೈಗೊಳ್ಳಬೇಕಿದೆ. ಕಲ್ಲು ಗಣಿಗಾರಿಕೆಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಹೊರ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಗೆ ಕಡ್ಡಾಯ ರಕ್ತಲೇಪನ ಸಂಗ್ರಹಿಸಿ ದೃಢಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳು ತ್ವರಿತ ಚಿಕಿತ್ಸೆ ನೀಡುವುದು ಅಗತ್ಯ ಎಂದು ತಿಳಿಸಿದರು.

ಸೊಳ್ಳೆಗಳ ನಿಯಂತ್ರಣ ಅಗತ್ಯ:

ಸೊಳ್ಳೆ ಉತ್ಪತ್ತಿ ತಾಣಗಳಾದ ತೆರೆದ ತೊಟ್ಟಿ, ಮೇಲ್ಚಾವಣಿ ಇಲ್ಲದ ತೊಟ್ಟಿಗಳು ಕಿರು ನೀರು ಸರಬರಾಜು ಮಾಡುವಂತಹ ತೊಟ್ಟಿಗಳನ್ನು ಭದ್ರವಾದ ಮುಚ್ಚಳ ಅಥವಾ ಬಟ್ಟೆಯನ್ನು ಮುಚ್ಚಬೇಕು. ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ತೆರೆದ ತೊಟ್ಟಿಗಳಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಅವುಗಳ ಮೇಲ್ಭಾಗವನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದರು.

ಆರೋಗ್ಯ ಇಲಾಖೆ ಪೋಸ್ಟರ್, ಬ್ಯಾನರ್‌ಗಳ ಮೂಲಕ, ಮಾಹಿತಿ- ಶಿಕ್ಷಣ-ಸಂವಹನ ಚಟುವಟಿಕೆಗಳ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರಿಕೆ ಹಾಗೂ ಜನಜಾಗೃತಿ ಮೂಡಿಸುತ್ತಿದೆ. ಕುಡಿಯುವ ನೀರು ಸರಬರಾಜು ಮಾಡುವ ಮೊದಲು ಸೂಕ್ತ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡುವುದು ಅಗತ್ಯ. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗ್ರಾಮ-ನಗರ ಪ್ರದೇಶಗಳಲ್ಲಿ ಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳು, ನೀರು ಶೇಖರಣೆ ಗೊಳ್ಳುವ ಇತರೆ ಅನುಪಯುಕ್ತ ವಸ್ತುಗಳ ಸೂಕ್ತ ವಿಲೇವಾರಿ ಕೈಗೊಳ್ಳುವುದು ಅಗತ್ಯ ಎಂದರು.

ಬೆಂ.ಗ್ರಾ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾರದ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಶಿವಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಕೀಟ ಶಾಸ್ತ್ರ ತಜ್ಞರಾದ ಲತಾ, ಆರೋಗ್ಯ ಮೇಲ್ವಿಚಾರಕ ನಟರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

28ಕೆಡಿಬಿಪಿ1-

ದೊಡ್ಡಬಳ್ಳಾಪುರದಲ್ಲಿ ಬೆಂ.ಗ್ರಾ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಜಿಲ್ಲಾ ಮಟ್ಟದ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.