ಸಂವಿಧಾನದ ಮೌಲ್ಯಗಳ ಬಗ್ಗೆ ಯುವಜನತೆಯಲ್ಲಿ ಸೂಕ್ತ ಅರಿವಿದ್ದಾಗ ಮಾತ್ರ ಶಿಸ್ತುಬದ್ಧ ಜೀವನ ಸಾಧ್ಯ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಸಂವಿಧಾನದ ಮೌಲ್ಯಗಳ ಬಗ್ಗೆ ಯುವಜನತೆಯಲ್ಲಿ ಸೂಕ್ತ ಅರಿವಿದ್ದಾಗ ಮಾತ್ರ ಶಿಸ್ತುಬದ್ಧ ಜೀವನ ಸಾಧ್ಯ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.

ಅವರು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. 1.4 ಕೋಟಿ ಗೂ ಹೆಚ್ಚು ಜನರಿದ್ದರೂ ಸಹ ನೆಮ್ಮದಿಯ ಜೀವನ ನಡೆಸಲು ಸಂವಿಧಾನದ ಮೌಲ್ಯಗಳೇ ಕಾರಣ. ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಸಂಪತ್ತು ಹೊಂದಿರುವ ನಮ್ಮ ದೇಶದ ಯುವಜನತೆಯಲ್ಲಿ ಸಂವಿಧಾನದ ಬಗ್ಗೆ ಹೆಚ್ಚಿನ ತಿಳುವಳಿಕೆ ಪಡೆದು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸಂವಿಧಾನದ ಪೀಠಿಕೆ ಬೋಧಿಸಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಮೊಗವೀರ ಉಪನ್ಯಾಸ ನೀಡಿದರು. ಯುವ ಸಂಸತ್ತು ಕಾರ್ಯಕ್ರಮದ ಪೋಸ್ಟರ್‌ ಅನಾವರಣಗೊಳಿಸಲಾಯಿತು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ ಮತ್ತಿತರರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.