ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರ ಮೈಸೂರು.ಸ್ವದೇಶ್ ದರ್ಶನ್ 2.0 ಯೋಜನೆಯಡಿ ಹಳೇ ಜಿಲ್ಲಾಧಿಕಾರಿ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿಪಡಿಸಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು ಹಾಗೂ ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ, ಸ್ಥಳೀಯ ಪ್ರವಾಸೋದ್ಯಮ ಸರ್ಕ್ಯೂಟ್ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.