ಇಂದು ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಿಂತು ಈ ದೇಶದ ಮಹಿಳೆಯರನ್ನು ಅವಮಾನ ಮಾಡಿದ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಬರುವ ಚುನಾವಣೆಯಲ್ಲಿ ಬ್ಯಾಲೆಟ್ ಮೂಲಕ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ
ಕನ್ನಡಪ್ರಭ ವಾರ್ತೆ ಕಾರವಾರಅಂದು ಆಪರೇಷನ್ ಸಿಂದೂರದ ನೇತೃತ್ವ ವಹಿಸಿದ್ದ ನಮ್ಮ ಸೇನಾಪಡೆಗಳ ಹೆಮ್ಮೆಯ ಮಹಿಳೆಯರು ಬುಲೆಟ್ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದರು. ಇಂದು ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಿಂತು ಈ ದೇಶದ ಮಹಿಳೆಯರನ್ನು ಅವಮಾನ ಮಾಡಿದ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಬರುವ ಚುನಾವಣೆಯಲ್ಲಿ ಬ್ಯಾಲೆಟ್ ಮೂಲಕ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಕೈ ವಿರುದ್ಧ ಹರಿಹಾಯ್ದರು. ನಾರಿ ಶಕ್ತಿ ಪೋರಂನಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಸಂಘಟನೆಯಲ್ಲಿ ನಗರದ ಬಾಡ ಬೃಂದಾವನ ಗಾರ್ಡನ್‌ನಲ್ಲಿ ಏರ್ಪಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಅಡ್ಡಿಯಾದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಬಿಜೆಪಿ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ, ಮಹಿಳೆಯರು ಸಬಲರಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಮುಂದಾದರೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಅದನ್ನು ವಿರೋಧಿಸುವ ಮೂಲಕ ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿದರು.
ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಸುಗುಣ, ಸುಜಾತಾ ಬಾಂದೆಕರ್, ಕಲ್ಪನಾ ನಾಯ್ಕ್, ನಯನಾ ನೀಲವರ್, ವೈಶಾಲಿ ತಾಂಡೆಲ್, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ನಗರ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ್, ರವಿರಾಜ್ ಅಂಕೋಲೆಕರ ಇದ್ದರು.ಮಾಲಾ ಹುಲಸ್ವಾರ ಪ್ರಾಸ್ತಾವಿಕ ಮಾತನಾಡಿದರು. ವೈಶಾಲಿ ಸ್ವಾಗತಿಸಿದರು.ಮಹಿಳಾ ದಿನಾಚರಣೆ:ಮಧ್ಯಾಹ್ನ ಇದೇ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳೆಯರು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಯೋಗ, ನೃತ್ಯ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಉತ್ಸಾಹದಿಂದ ಪಾಲ್ಗೊಂಡರು. ವಿಜೇತರಿಗೆ ಬಹುಮಾನ ನೀಡಲಾಯಿತು.