ಎಸ್.ಎಂ. ಕೃಷ್ಣಗೆ ಪುಷ್ಪ ನಮನದ ಶ್ರದ್ಧಾಂಜಲಿ

| Published : Dec 11 2024, 12:46 AM IST

ಸಾರಾಂಶ

ಅಜಾತಶತ್ರು, ಅಪ್ರತಿಮ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹಾವೇರಿ: ಅಜಾತಶತ್ರು, ಅಪ್ರತಿಮ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಂ. ಕೃಷ್ಣ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು, ಶಾಲಾ ಮಕ್ಕಳಿಗೆ ಬಿಸಿಯೂಟ ಪ್ರಾರಂಭಿಸಿ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಸುವರ್ಣಸೌಧ ನಿರ್ಮಿಸಿ ದಾಖಲೆ ನಿರ್ಮಿಸಿದ್ದಾರೆ. ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸುವಲ್ಲಿ ಶ್ರಮ ವಹಿಸಿದ್ದಾರೆ. ತಹಶೀಲ್ದಾರ ಕಚೇರಿಗಳಲ್ಲಿ ಭೂಮಿ ಕೇಂದ್ರ ಆರಂಭಿಸಿ ರೈತರ ಖಾತೆಗಳನ್ನು ಡಿಜಲೀಕರಣ ಮಾಡಿದ್ದಾರೆ ಎಂದು ಸ್ಮರಿಸಿದ ಅವರು, ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಇವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಂ.ಎ.ಹಿರೇಮಠ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಮಾಜಿ ಶಾಸಕ ನೆಹರು ಓಲೇಕಾರ, ಎಂ.ಎಂ.ಮೈದೂರ, ಪ್ರಭುಗೌಡ್ರ ಭಿಷ್ಟನಗೌಡ್ರ, ಶಂಕರ್ ಮೆಹರವಾಡೆ, ನಗರಸಭೆ ಸದಸ್ಯರು, ಮಹಿಳಾ ಕಾರ್ಯಕರ್ತರು, ಯುವ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.