ಸಾರಾಂಶ
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು.
ಪೂರ್ವಭಾವಿ ಸಭೆಯಲ್ಲಿ ಸಾಜಿದ್ ಮುಲ್ಲಾಕನ್ನಡಪ್ರಭ ವಾರ್ತೆ ಕಾರವಾರ
ಜಿಲ್ಲೆಯಲ್ಲಿ ನ. 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮ ಆಯೋಜಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ನಿರ್ದೇಶನ ನೀಡಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಮತ್ತು ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿ ರಚಿಸಿದ ಅವರು, ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ ಕುರಿತ ವಿವಿಧ ಉಪ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿಯಾಗಿ ಏರ್ಪಡಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ಜಿಪಂ, ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಗೆ, ಬಂದರು ಇಲಾಖೆ ಮತ್ತು ನಗರಸಭೆಯಿಂದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಮತ್ತು ಪಥ ಸಂಚಲನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಎನ್.ಸಿ.ಸಿ, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದ ಅಪರ ಜಿಲ್ಲಾಧಿಕಾರಿಗಳು, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಉಪ ವಿಭಾಗಾಧಿಕಾರಿ ಶ್ರವಣಕುಮಾರ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್ ಇದ್ದರು.