ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮೆದುಳು ಮಾನವ ದೇಹದ ಅತ್ಯಂತ ಪ್ರಮುಖ ಅಂಗ. ಇದರ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಮೆದುಳು ದಿನ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ನಾಗರಾಜ್ ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಬೋಧಕ ಆಸ್ಪತ್ರೆ (ಸಿಎಂಸಿಆರ್‍ಐ) ಸಂಯುಕ್ತಾಶ್ರಯದಲ್ಲಿ ನಗರದ ಬಿ.ಸಿ ರಾಯ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮೆದುಳು ದಿನಾಚರಣೆ ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಮೆದುಳಿನ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವನೆ, ನಿತ್ಯ ಕನಿಷ್ಠ 30 ನಿಮಿಷಗಳ ವ್ಯಾಯಾಮ, 7 ರಿಂದ 8 ಗಂಟೆಗಳ ಸಾಕಷ್ಟು ನಿದ್ದೆ ಅತ್ಯಗತ್ಯ. ಅಲ್ಲದೆ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ರಕ್ತದೊತ್ತಡ, ಮಧುಮೇಹ ಹಾಗೂ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಸಲಹೆ ನೀಡಿದರು.
ಮೆದುಳನ್ನು ಸಕ್ರಿಯವಾಗಿಡಲು ಪುಸ್ತಕ ಓದುವುದು, ಒಗಟುಗಳನ್ನು ಬಿಡಿಸುವುದು ಮತ್ತು ಹೊಸ ಕೌಶಲ್ಯಗಳನ್ನು ಕಲಿಯುವಂತಹ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ, ಧ್ಯಾನ, ಉಸಿರಾಟದ ವ್ಯಾಯಾಮ, ಹಾಗೂ ಸಂಗೀತದಂತಹ ಹವ್ಯಾಸಗಳನ್ನು ಬೆಳೆಸಿಕೊಳ್ಳುವಂತೆ ಡಾ.ನಾಗರಾಜ್ ಕಿವಿಮಾತು ಹೇಳಿದರು.ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರರೋಗ ತಜ್ಞ ಡಾ.ಕಿರಣಗೌಡ ಅವರು, ತಲೆನೋವು, ಅಪಸ್ಮಾರ, ಪಾಶ್ರ್ವವಾಯು, ಮತ್ತು ಡಿಮೆನ್ಷಿಯಾದಂತಹ ರೋಗಗಳ ಲಕ್ಷಣಗಳು, ಕಾರಣಗಳು ಹಾಗೂ ನಿಯಂತ್ರಣಾ ವಿಧಾನಗಳ ಕುರಿತು ಉಪನ್ಯಾಸ ನೀಡಿದರು. ತದನಂತರ ಶಿಬಿರದಲ್ಲಿ ಭಾಗವಹಿಸಿದ್ದ ರೋಗಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ವೈದ್ಯಾಧಿಕಾರಿ ಡಾ.ಶಿವ ಸಾದ್ವಿನ್ ಮಾತನಾಡಿ, ಅಪಸ್ಮಾರ, ಪಾಶ್ರ್ವವಾಯುವಿನಂತಹ ಗಂಭೀರ ರೋಗಗಳಿಗೆ ಸಾರ್ವಜನಿಕರು ಸ್ಥಳೀಯ ನಾಟಿ ವೈದ್ಯರ ಬಳಿ ತೆರಳಿ ಅಮೂಲ್ಯ ಸಮಯ ವ್ಯರ್ಥ ಮಾಡಬಾರದು. ಗಂಭೀರ ಸ್ಥಿತಿ ತಲುಪುವ ಮುನ್ನವೇ ನೇರವಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 46ಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆ ಪಡೆಯಬೇಕು ಎಂದು ಮನವಿ ಮಾಡಿದರು.
ವೈದ್ಯಕೀಯ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಜಿ.ಎಚ್.ಮೇಘ ಮಾತನಾಡಿ, ನಮ್ಮ ಜಿಲ್ಲಾ ಆಸ್ಪತ್ರೆಯು ಈಗ ವೈದ್ಯಕೀಯ ಬೋಧಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದ್ದು, ಹಂತ ಹಂತವಾಗಿ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳು ಇಲ್ಲಿಯೇ ಲಭ್ಯವಾಗುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು., ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಡ್ಡಿ ಕೊಣ್ಣೂರ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಇದ್ದರು.