ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ

| Published : Sep 28 2024, 01:15 AM IST

ಸಾರಾಂಶ

ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಗ್ರಾಮೀಣ ಭಾಗದ ಮಕ್ಕಳಿಗೂ ಎಲ್ಲಾ ರೀತಿಯ ಮೂಲ ಸೌಲಭ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ಹೋಬಳಿ ಕೇಂದ್ರಕ್ಕೊಂದು ಸುಸಜ್ಜಿತ ಸರ್ಕಾರಿ ಶಾಲೆ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ ಯೋಜನೆಯಡಿ ಅಜೀಂ ಪ್ರೇಮ್‌ ಜೀ ಫೌಂಡೇಷನ್ ಸಹಭಾಗಿತ್ವದಲ್ಲಿ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳನ್ನು ಪರೀಕ್ಷೆಯಲ್ಲಿ ಪಾಸ್ ಮಾಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ. ಪ್ರತಿದಿನ ದೇಶದ ಇತಿಹಾಸ ಮತ್ತು ಸಂವಿಧಾನದ ಬಗ್ಗೆ ಮಕ್ಕಳಿಗೆ ಕನಿಷ್ಠ ಹತ್ತು ನಿಮಿಷ ತಿಳಿಸಿಕೊಡಬೇಕು. ಮಕ್ಕಳಿಗೆ ಶಿಕ್ಷಕರು ಸಂಸ್ಕಾರಯುತ ಶಿಕ್ಷಣ ನೀಡುವ ಜೊತೆಗೆ ನಾಡಿನ ಕಲೆ, ಸಂಸ್ಕೃತಿ, ದೇಶ ನಡೆದು ಬಂದ ಬೆಳವಣಿಗೆ ಕುರಿತು ಅರಿವು ಮೂಡಿಸಬೇಕು ಎಂದರು.

45 ಸಾವಿರ ಅತಿಥಿ ಶಿಕ್ಷಕರ ನೇಮಕ:

ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ ಎಂದು ಹೇಳಿದರು.

ಇದೇ ವೇಳೆ ಸಚಿವರು ಮಕ್ಕಳಿಗೆ ರಾಗಿ ಮುದ್ದೆ, ಸೊಪ್ಪಿನ ಸಾಂಬರ್ ಜೊತೆಗೆ ಮೊಟ್ಟೆ ಬಡಿಸುವ ಮೂಲಕ ಚಾಲನೆ ನೀಡಿದರು. ಮಕ್ಕಳ ಸರತಿಯಲ್ಲೇ ಕುಳಿತು ಊಟ ಮಾಡಿದರು. ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಓ ಸತೀಶ್, ಬಿಇಒ ಕೆ.ಯೋಗೇಶ್, ಪುರಸಭೆ ಉಪಾಧ್ಯಕ್ಷೆ ವಸಂತಲಕ್ಷ್ಮಿ, ಮುಖ್ಯಾಧಿಕಾರಿ ಶ್ರೀನಿವಾಸ್, ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಬಿ.ಎಂ.ಪ್ರಕಾಶ್, ಮುಖಂಡರಾದ ಅಶೋಕ್, ಜಯರಾಜು, ಸ್ವಾಮಿ, ಕಾಳಪ್ಪ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.