ನಾಡಿನ ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಿಂದ ದೀಪಾವಳಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ದೇವಾಲಯದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಹನೂರು
ನಾಡಿನ ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಿಂದ ದೀಪಾವಳಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ದೇವಾಲಯದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ದೀಪಾವಳಿ ಜಾತ್ರೆಯು ಶನಿವಾರ ವಿಶೇಷ ಪೂಜೆ ಮೂಲಕ ಪ್ರಾರಂಭಗೊಂಡಿದ್ದು ನ.7ರಂದು ಶ್ರೀ ಸ್ವಾಮಿಗೆ ಎಣ್ಣೆ ಮಜ್ಜನ ಪೂಜೆ ಮತ್ತು ಉತ್ಸವ, ನ.8ರಂದು ನರಕ ಚತುರ್ದಶಿ ವಿಶೇಷ ಸೇವೆ ಮತ್ತು ಉತ್ಸವ, ನ.9ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಹಾಲರುವೆ ಉತ್ಸವ, ನ.10ರಂದು ದೀಪಾವಳಿ ಮಹಾರಥೋತ್ಸವ ಬೆಳಿಗ್ಗೆ 7.30ರಿಂದ 8.40ರವರೆಗೆ ಜರುಗಲಿದೆ. ಮಹಾರಥೋತ್ಸವದ ನಂತರ ಗುರು ಬ್ರಹ್ಮೋತ್ಸವ ಮತ್ತು ಅನ್ನ ಬ್ರಹ್ಮೋತ್ಸವ, ರಾತ್ರಿ ಮಹಾ ನೈವೇದ್ಯದ ನಂತರ ತೆಪ್ಪೋತ್ಸವ ಜರುಗಲಿದೆ.
ಪ್ರತಿನಿತ್ಯ ಬೆಳಿಗ್ಗೆ 6.30 ಗಂಟೆಯಿಂದ ಸಂಜೆ 6.30ರವರೆಗೆ, ರಾತ್ರಿ 8.30ರಿಂದ ಬೀಗಮುದ್ರೆ ಹಾಕುವವರೆಗೂ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶ್ರೀ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಮಾಹಿತಿ ನೀಡಿದೆ.ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟದವರೆಗಿನ ಮಾರ್ಗಮಧ್ಯದಲ್ಲಿ 15 ಕಡೆಗಳಲ್ಲಿ ಮಿನಿ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
ಪಾದಯಾತ್ರೆಯ ಮೂಲಕ ಮ.ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ, 60 ವರ್ಷ ಮೇಲ್ಪಟ್ಟವರಿಗೆ ರಾಜಗೋಪುರದ ಪ್ರವೇಶ ದ್ವಾರದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅತಿಥಿ ಗಣ್ಯರಿಗೆ, ಜನಪ್ರತಿನಿಧಿಗಳಿಂದ ಶಿಫಾರಸ್ಸು ಪತ್ರ ಪಡೆದು ಬರುವವರಿಗೆ ದೇವಸ್ಥಾನದ ಕಾರ್ಯಾಲಯದಲ್ಲಿ ವಿಶೇಷ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಪಡೆದವರಿಗೆ ಅತಿಥಿ ಗಣ್ಯರ ಗೇಟ್ ಮೂಲಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಗೇಟ್ ನಂ.4ರಲ್ಲಿ ಅಂಗವಿಕಲರು, ಗರ್ಭಿಣಿಯರು ತೆರಳಿ ದರ್ಶನ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ತಿಳಿಸಿದ್ದಾರೆ.ನಿರಂತರ ದಾಸೋಹ:
ಐದು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವುದರಿಂದ ಐದು ದಿನಗಳ ಕಾಲ ನಿರಂತರ ದಾಸೋಹ ವ್ಯವಸ್ಥೆ ಆರಂಭಗೊಂಡಿದೆ. ಭವನದ ಸಮೀಪವೇ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಬಾರಿಗೆ 2 ಸಾವಿರ ಜನರು ಪ್ರಸಾದ ಸ್ವೀಕರಿಸಬಹುದಾಗಿದೆ.350 ಬಸ್ ವ್ಯವಸ್ಥೆ:
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಕೆಎಸ್ಆರ್ಟಿಸಿ ವತಿಯಿಂದ ಚಾಮರಾಜನಗರ, ಮೈಸೂರು ನಗರ, ಮೈಸೂರು ಗ್ರಾಮಾಂತರ, ಮಂಡ್ಯ, ಬೆಂಗಳೂರು, ರಾಮನಗರ ಘಟಕಗಳಿಂದ 350 ಬಸ್ಗಳ ವ್ಯವಸ್ಥೆ ಮಾಡಲಾಗಿದೆ.ವಾಹನಗಳು ಕೆಟ್ಟು ನಿಂತರೆ ದುರಸ್ತಿಪಡಿಸಲು 20 ಮಂದಿ ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ತಿಳಿಸಿದ್ದಾರೆ.
ದ್ವಿಚಕ್ರ ವಾಹನಕ್ಕೆ ನಿರ್ಬಂಧ:ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಂ ತಡೆಗಟ್ಟಲು ನ.6ರ ಬೆಳಿಗ್ಗೆ 6 ಗಂಟೆಯಿಂದ ನ.10ರ ಸಂಜೆ 6 ಗಂಟೆಯವರೆಗೆ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವುದನ್ನು ನಿರ್ಬಂಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇಲ್ಲಿಂದ ಕೆಎಸ್ಆರ್ಟಿಸಿ ಬಸ್ ಮುಖಾಂತರ ಮ.ಬೆಟ್ಟಕ್ಕೆ ತೆರಳಬಹುದು.
3 ಲಕ್ಷ ಲಾಡು ಸಂಗ್ರಹಣೆ:ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇರಿದಂತೆ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಾಡು ಪ್ರಸಾದ ವಿತರಣೆ ಮಾಡಲಾಗುತ್ತದೆ. ಇದಲ್ಲದೆ ಲಾಡು ಪ್ರಸಾದವನ್ನು ಪ್ರಸಾದವಾಗಿ ಭಕ್ತಾದಿಗಳು ಖರೀದಿಸುವುದರಿಂದ 3 ಲಕ್ಷ ಲಾಡು ಸಂಗ್ರಹಣೆ ಮಾಡಿಕೊಳ್ಳಲಾಗಿದ್ದು ನಿತ್ಯ ಬಾಣಸಿಗರು 30 ಸಾವಿರಕ್ಕೂ ಅಧಿಕ ಲಾಡು ತಯಾರಿಸುತ್ತಿದ್ದಾರೆ.