ಕನ್ನಡಪ್ರಭ ವಾರ್ತೆ ಬೆಳಗಾವಿ
ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸಂಭ್ರಮಾಚರಣೆ ನಡೆಸಿದರು. ವಿವಿಧ ರಾಜ್ಯಗಳಲ್ಲಿ ಪಕ್ಷ ಸಾಧಿಸಿರುವ ಯಶಸ್ಸಿನ ಹಿನ್ನೆಲೆಯಲ್ಲಿ ನಗರದಲ್ಲಿ ವಿಜಯೋತ್ಸವದ ವಾತಾವರಣ ನಿರ್ಮಾಣವಾಗಿತ್ತು.ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಕಚೇರಿಯಲ್ಲಿ ಫಲಿತಾಂಶ ಘೋಷಣೆಯ ಕ್ಷಣದಿಂದಲೇ ಕಾರ್ಯಕರ್ತರು ಸೇರಿ ಸಿಹಿ ಹಂಚಿಕೊಂಡು, ಪಟಾಕಿ ಸಿಡಿಸಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು. ಬಳಿಕ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಜೈ ಶ್ರೀರಾಮ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗುತ್ತ ಉತ್ಸಾಹಭರಿತವಾಗಿ ಸಂಭ್ರಮಿಸಿದರು. ಪಕ್ಷದ ಧ್ವಜಗಳನ್ನು ಹಾರಿಸಿ, ಪರಸ್ಪರ ಅಭಿನಂದನೆಗಳನ್ನು ವಿನಿಮಯ ಮಾಡಿಕೊಂಡರು.ಮಾಜಿ ಶಾಸಕ ಅನಿಲ ಬೆನಕೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ, ದೂರದೃಷ್ಟಿ ಮತ್ತು ಪಕ್ಷದ ಬಲಿಷ್ಠ ಸಂಘಟನೆ ಈ ಜಯಕ್ಕೆ ಪ್ರಮುಖ ಕಾರಣವಾಗಿದೆ. ವಿರೋಧ ಪಕ್ಷಗಳ ದುರಾಡಳಿತ ಹಾಗೂ ಸುಳ್ಳು ಭರವಸೆಗಳಿಂದ ಬೇಸತ್ತಿದ್ದ ಜನತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಈ ಗೆಲುವು ಪಕ್ಷದ ಎಲ್ಲ ಕಾರ್ಯಕರ್ತರ ಪರಿಶ್ರಮದ ಫಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ಸುತಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಭಾರೀ ಬೆಂಬಲ ನೀಡಿರುವುದು ಪಕ್ಷದ ಅಭಿವೃದ್ಧಿ ಕಾರ್ಯಗಳಿಗೂ, ಶಾಸನದ ಮೇಲಿನ ನಂಬಿಕೆಗೆ ಸಾಕ್ಷಿಯಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಪಕ್ಷ ಐತಿಹಾಸಿಕ ಸಾಧನೆ ಮಾಡಿದೆ ಎಂದು ಬಣ್ಣಿಸಿದರು.ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ವಿರುದ್ಧ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಾರಿ ಸ್ಪಷ್ಟ ನಿರ್ಣಯದ ಮೂಲಕ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.ರಾಜ್ಯದಲ್ಲಿ ನಡೆದ ದೌರ್ಜನ್ಯ, ಅಶಾಂತಿ ಹಾಗೂ ಮಹಿಳಾ ಭದ್ರತೆ ಕೊರತೆ ಮೊದಲಾದ ವಿಚಾರಗಳನ್ನು ಜನತೆ ತಿರಸ್ಕರಿಸಿದ್ದು, ಬದಲಾವಣೆಯ ಆಶಯದಿಂದ ಬಿಜೆಪಿಯನ್ನು ಆರಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.ವಿಜಯೋತ್ಸವದಲ್ಲಿ ಲೀನಾ ಟೋಪಣ್ಣವರ, ರುದ್ರಣ್ಣ ಚಂದರಗಿ, ಮುರಘೇಂದ್ರಗೌಡ ಪಾಟೀಲ, ಈರಯ್ಯ ಖೋತ, ಮಹಾಂತೇಶ ವಕ್ಕುಂದ ಮೊದಲಾದವರು ಪಾಲ್ಗೊಂಡಿದ್ದರು.ಈ ಫಲಿತಾಂಶಗಳು ಕರ್ನಾಟಕ ರಾಜಕೀಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ದೇಶವನ್ನು ವಿಶ್ವಗುರುವನ್ನಾಗಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿಗೆ ಜನತೆ ದೇಶದಾದ್ಯಂತ ಬೆಂಬಲ ಸೂಚಿಸುತ್ತಿದ್ದಾರೆ.
-ಅನಿಲ ಬೆನಕೆ, ಮಾಜಿ ಶಾಸಕರು.