ಒಂದು ಕೈಯಲ್ಲಿ ಗ್ಯಾರಂಟಿ, ಮತ್ತೊಂದು ಕೈಯಲ್ಲಿ ಕಸಿವ ಯತ್ನ

| Published : Apr 13 2024, 01:03 AM IST

ಒಂದು ಕೈಯಲ್ಲಿ ಗ್ಯಾರಂಟಿ, ಮತ್ತೊಂದು ಕೈಯಲ್ಲಿ ಕಸಿವ ಯತ್ನ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಜನಕ್ಕೆ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿವ ಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಹೊಳಲ್ಕೆರೆ: ರಾಜ್ಯದ ಜನಕ್ಕೆ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿವ ಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಲೋಕಸಭೆ ಚುನಾವಣೆ ಹಿನ್ನಲೆ ಶುಕ್ರವಾರ ಹೊಳಲ್ಕೆರೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಬಕಾರಿ ಶುಲ್ಕ, ಬಸ್ ದರ ಏರಿಕೆ, ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಪರ ಇದ್ದೇವೆ ಎಂದು ಕಣ್ಣೀರು ಸುರಿಸುತ್ತಿದ್ದಾರೆಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಕಿಸಾನ್ ಸಮ್ಮಾನ್, ರೈತರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತ ವಿದ್ಯಾಸಿರಿ ಇವೆಲ್ಲಕ್ಕೂ ಕಾಂಗ್ರೆಸ್ ಕಲ್ಲು ಹಾಕಿದೆ. ರೈತರಿಗೆ ಬೆಳೆ ನಷ್ಟ ಬರಪರಿಹಾರ ಕೊಡದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ದೇಶದ 9 ರಾಜ್ಯಗಳಲ್ಲಿ ಬರಗಾಲವಿದೆ. ಅಲ್ಲಿನ ಮುಖ್ಯಮಂತ್ರಿಗಳೆ ಖಜಾನೆಯಿಂದ ಪರಿಹಾರ ನೀಡಿದ್ದಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನಯಾ ಪೈಸೆಯನ್ನು ಕೊಟ್ಟಿಲ್ಲ. 680 ಕೋಟಿ ರು. ಹೈನುಗಾರಿಕೆಗೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿದ್ದೆ ಬರುತ್ತಿಲ್ಲ. ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿರುವುದರಿಂದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿ ಎಂದು ಕೋರಿದರು.

ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರು ತಮ್ಮ ಹೊಲಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು 25 ಸಾವಿರ ರು.ಗಳನ್ನು ಪಾವತಿಸಿದರೆ ಟ್ರಾನ್ಸ್ ಫಾರ್ಮರ್ ಅಳವಡಿಸಿ ವೈರ್ ಎಳೆದು ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಸಿದ್ದರಾಮಯ್ಯನವರ ಅಧಿಕಾರದಲ್ಲಿ ರೈತರು ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಎರಡುವರೆಯಿಂದ ಮೂರು ಲಕ್ಷ ರು.ಗಳನ್ನು ಕಟ್ಟಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳಿಗೆ ಮೀಸಲಾಗಿಟ್ಟಿದ್ದ 24 ಸಾವಿರ ಕೋಟಿ ರು.ಗಳನ್ನು ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿಗಳಿಗೆ ಬಳಿಸಿಕೊಂಡು ಎಸ್ಸಿ, ಎಸ್ಟಿಗಳಿಗೆ ದ್ರೋಹವೆಸಗಿದೆ ಎಂದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ನಂಬಿದವರಿಗೆ ಮೋಸ ಮಾಡುವ ಜಾಯಮಾನ ನಮ್ಮದಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನನ್ನ ಪುತ್ರ ಎಂ.ಸಿ.ರಘುಚಂದನ್ ಕೂಡ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ. ಆದರೆ ಬಿ.ಎಸ್.ಯಡಿಯೂರಪ್ಪನವರ ಮಾತಿಗೆ ಬೆಲೆ ಕೊಟ್ಟು ಸುಮ್ಮನಾಗಿದ್ದೇವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವುದಾಗಿ ಬಿ.ವೈ.ವಿಜಯೇಂದ್ರ ಅವರಿಗೆ ಭರವಸೆ ನೀಡಿದರು.

ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, 10 ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿಲ್ಲ. ಭ್ರಷ್ಟಾಚಾರದ ಆಪಾದನೆಯಿಲ್ಲ. ಜಗತ್ತಿನ ಎಲ್ಲಾ ದೇಶಗಳು ಭಾರತದ ಸ್ನೇಹ ಬಯಸುವ ರೀತಿಯಲ್ಲಿ ಅಧಿಕಾರ ನಡೆಸಿದ್ದಾರೆ. ಬಿಜೆಪಿ ಸಾಧನೆಯನ್ನು ಮುಂದಿಟ್ಟುಕೊಂಡು ಬೂತ್ ಮಟ್ಟದಲ್ಲಿ ಮನೆ ಮನೆಗೆ ಹೋಗಿ ಧೈರ್ಯದಿಂದ ಮತ ಕೇಳಿ ಎಂದರು.

ಯುವ ಮುಖಂಡ ಎಂ.ಸಿ.ರಘುಚಂದನ್, ವಿಧಾನಪರಿಷತ್ ಸದಸ್ಯರುಗಳಾದ ರವಿಕುಮಾರ್, ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಮಂಡಲ ಅಧ್ಯಕ್ಷ ಎಂ.ಬಿ.ಸಿದ್ದೇಶ್, ಭರಮಸಾಗರ ಮಂಡಲ ಅಧ್ಯಕ್ಷ ಶೈಲೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಲೋಕಸಭಾ ಚುನಾವಣೆ ಸಂಚಾಲಕ ಲಿಂಗಮೂರ್ತಿ, ಬಿಜೆಪಿ ಮತ್ತು ಜೆಡಿಎಸ್ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.