ವಿದ್ಯಾರ್ಥಿಗಳು ಜಾಗೃತವಾದರೆ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯವಿದೆ. ಮಕ್ಕಳಿಗೆ ಕಾನೂನು ಜ್ಞಾನವಿದ್ದಲ್ಲಿ ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಸುಲಭವಾಗಿ ಎದುರಿಸಲು ಸಹಕಾರಿಯಾಗುತ್ತದೆ ಎಂದು ಅಥಣಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್.ಕೆ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ವಿದ್ಯಾರ್ಥಿಗಳು ಜಾಗೃತವಾದರೆ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯವಿದೆ. ಮಕ್ಕಳಿಗೆ ಕಾನೂನು ಜ್ಞಾನವಿದ್ದಲ್ಲಿ ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಸುಲಭವಾಗಿ ಎದುರಿಸಲು ಸಹಕಾರಿಯಾಗುತ್ತದೆ ಎಂದು ಅಥಣಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್.ಕೆ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ತಾಲೂಕ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸುರಕ್ಷಿತ್ ಬಚಪನ್ ಅಭಿಯಾನದಡಿ ಮಕ್ಕಳ ಸುರಕ್ಷತೆಯ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಧನಾತ್ಮಕ ಚಿಂತನೆ ಮತ್ತು ಜವಾಬ್ದಾರಿಯನ್ನ ಅರಿತು ಶಿಕ್ಷಣ ಪಡೆದುಕೊಳ್ಳಬೇಕು. ಸಮಾಜಘಾತಕ ಚಟುವಟಿಕೆಗಳನ್ನು ವಿರೋಧಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು. ಅದಕ್ಕಾಗಿ ಶಿಕ್ಷಣದ ಜೊತೆಗೆ ಕಾನೂನಿನ ಅರಿವು ಬಹಳ ಅಗತ್ಯವಾಗಿದೆ. ಇಂದಿನ ಆಧುನಿಕ ಯುಗದಲ್ಲೂ ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮತ್ತು ಪೋಸ್ಕೊ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಹಕ್ಕು ಮತ್ತು ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಇಂದಿನ ಅಗತ್ಯವಾಗಿದೆ. ಆರೋಗ್ಯ ಮತ್ತು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅದರಿಂದ ಹೊರಬರುವ ಅಗತ್ಯವಿದೆ. ಮೊಬೈಲ್ ನಿಂದ ಅನೇಕ ಮೋಸದ ಪ್ರಕರಣಗಳು ನಡೆಯುತ್ತಿದ್ದು, ಅನೇಕ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ವಿದ್ಯಾಭ್ಯಾಸಕ್ಕೆ ಅಗತ್ಯವಿದ್ದಷ್ಟೇ ಬಳಸಿಕೊಂಡು ಪುಸ್ತಕಗಳನ್ನು, ಪತ್ರಿಕೆಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳುವಂತೆ ಸಲಹೆ ನೀಡಿದರು. ತಾಲೂಕ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ.ಎ.ಹುದ್ದಾರ ಮಾತನಾಡಿ, ನಾಗರಿಕತೆ ಬೆಳೆದು, ಸುಶಿಕ್ಷಿತರ ಸಂಖ್ಯೆ ಹೆಚ್ಚಾದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಪೂರ್ಣ ನಿಯಂತ್ರಣ ಸಾಧ್ಯವಾಗಿಲ್ಲ. ಇದಕ್ಕೆ ಜನರಲ್ಲಿ ಕಾನೂನು ಅರಿವು ಇಲ್ಲದಿರುವುದು ಪ್ರಮುಖ ಕಾರಣವಾಗಿದೆ. ಅಲ್ಲದೇ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಸಮಾಜವೇ ತಲೆತಗ್ಗಿಸುವಂತೆ ಮಾಡುತ್ತವೆ. ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಲ್ಲಿ ನಡೆಯುವ ಕಾನೂನು ಅರಿವು, ನೆರವು ಕಾರ್ಯಕ್ರಮ ಮತ್ತು ಅಧ್ಯಯನ ನಡೆಸುವ ಮೂಲಕ ಕಾನೂನು ಜ್ಞಾನ ಹೊಂದಬೇಕು ಎಂದು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಡಿ.ಡಿ.ಮೇಕನಮರಡಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಬಿ.ಕಾಂಬಳೆ, ಪ್ರವೀಣ ಕಾಂಬಳೆ, ಆರ್.ಪಿ.ನಲವಡೆ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಲಲಿತಾ ಮೇಕನಮರಡಿ ಸ್ವಾಗತಿಸಿದರು. ವೈ.ಎ.ಜಮಾದರ ನಿರೂಪಿಸಿದರು. ಮುಖ್ಯೋಪಾಧ್ಯಾಯ ಪ್ರಶಾಂತ್ ಮುನ್ನೊಳ್ಳಿ ವಂದಿಸಿದರು.