ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳ ಜೀವನದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ.

ಶಿರಸಿ: ವ್ಯಸನಮುಕ್ತ ವ್ಯಕ್ತಿಗಳಿಂದ ನೆಮ್ಮದಿಯ ಕುಟುಂಬ, ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಹೇಳಿದರು.ನಗರದ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಗಾಂಧಿ ಸ್ಮೃತಿ ಹಾಗೂ ನವಜೀವನ ಸಮಿತಿಯ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳ ಜೀವನದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ರವಿ ಬೆಳ್ಳಿಮನೆ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಮಾಜಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ ಮಾತನಾಡಿ, ಮದ್ಯಪಾನ ತ್ಯಜಿಸಿ ಹೊಸ ಬದುಕು ಕಟ್ಟಿಕೊಂಡವರು ತಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು. ಇದರಿಂದ ವ್ಯಸನದ ಸಮಸ್ಯೆ ಎದುರಿಸುತ್ತಿರುವವರಿಗೆ ಪ್ರೇರಣೆ ದೊರೆಯುವುದರ ಜತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಕುಟುಂಬದ ವಾತಾವರಣ, ಪೋಷಕರ ನಡವಳಿಕೆ ಹಾಗೂ ಭಾಷೆಯ ಬಳಕೆ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸಬೇಕು ಎಂದರು.ಶಿರಸಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ವೀಣಾಜೀ ಮಾತನಾಡಿ, ವ್ಯಸನಮುಕ್ತ ಜೀವನಕ್ಕೆ ದೃಢಸಂಕಲ್ಪ, ಆತ್ಮವಿಶ್ವಾಸ ಹಾಗೂ ನಿರಂತರ ಪ್ರಯತ್ನ ಅಗತ್ಯ. ಕೆಟ್ಟ ಚಟಗಳನ್ನು ತ್ಯಜಿಸಿ ಮೌಲ್ಯಾಧಾರಿತ ಜೀವನ ನಡೆಸುವುದರಿಂದ ಕುಟುಂಬದಲ್ಲಿ ಸಂತೋಷ ಹಾಗೂ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾಧ್ಯ ಎಂದರು.ನವಜೀವನ ಸಮಿತಿಯ ಸದಸ್ಯರಾದ ಅರುಣ್ ಶೆಟ್ಟಿ, ವೆಂಕಟೇಶ್ ತಮ್ಮ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಂಘಟನಾ ಅಧ್ಯಕ್ಷೆ ಗೌರಿ ನಾಯ್ಕ್ ಮಾತನಾಡಿದರು. ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಅರ್ಚನಾ ರಾಘವೇಂದ್ರ ಉಪಸ್ಥಿತರಿದ್ದರು. ವಿಶಾಲಾಕ್ಷಿ ನಿರೂಪಿಸಿದರು. ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ವರದಿ ವಾಚಿಸಿದರು. ಮೇಲ್ವಿಚಾರಕರಾದ ಅರ್ಚನಾ ಸ್ವಾಗತಿಸಿದರು. ಸುನಂದ ವಂದಿಸಿದರು.