ಸಾರಾಂಶ
ಜಿಲ್ಲಾಡಳಿತ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
15 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗಿ । ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜಿಸಿದ ಬಂಟಿಂಗ್ಸ್
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ಜಿಲ್ಲಾಡಳಿತ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.ಅಂದಾಜು ಮಾಡಿರುವಂತೆ ಸುಮಾರು 15 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಲು ವಿವಿಧೆಡೆಯಿಂದ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿತ್ತು.ಮಧ್ಯಾಹ್ನ 2 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಬಂಟಿಂಗ್ಸ್‌ಗಳಿಂದ ರಾರಾಜಿಸುತ್ತಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 12.50ಕ್ಕೆ ಚಿಕ್ಕಮಗಳೂರಿಗೆ ಆಗಮಿಸಿದರು. ನಂತರ ಅವರು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು 2 ಗಂಟೆ ವೇಳೆಗೆ ಜಿಲ್ಲಾ ಆಟದ ಮೈದಾನಕ್ಕೆ ಆಗಮಿಸಿದರು.ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಮಹಿಳೆಯರಿಗೆ ಇಲ್ಲಿನ ಶ್ರೀ ಬೋಳರಾಮೇಶ್ವರ ದೇವಾಲಯ ಆವರಣದಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಮುಗಿಸಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮಹಿಳೆಯರು ಬಂದು ಆಸೀನರಾಗುತ್ತಿದ್ದಂತೆ ಕಾರ್ಯಕ್ರಮ ಆರಂಭಗೊಂಡಿತು. ಯಾವುದೇ ಗೊಂದಲ ಇಲ್ಲದಂತೆ ಕಾರ್ಯಕ್ರಮ ನಡೆಯಿತು. ಹೊರ ಊರುಗಳಿಂದ ಬಂದಿದ್ದ ಮಹಿಳೆಯರು ಊಟ ಮುಗಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮನ್ನು ಕರೆದುಕೊಂಡು ಬಂದಿದ್ದ ಬಸ್ಸುಗಳಲ್ಲಿ ಊರುಗಳಿಗೆ ತೆರಳಿದರು.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ಜಿಲ್ಲೆಯ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಧನ್ಯವಾದ ಹೇಳಿದರು.ಜಿಲ್ಲೆಯ ನೀರಾವರಿ ಯೋಜನೆಗೆ ಅನುದಾನ ನೀಡುವುದಾಗಿ ಭರವಸೆ ನೀಡುವ ಜತೆಗೆ ಕಾಫಿ ಬೆಳೆಗಾರರು ಈಗಾಗಲೇ ಒತ್ತುವರಿ ಮಾಡಿರುವ ಜಮೀನು ಅವರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಅರ್ಜಿ ಆಹ್ವಾನಿಸಬೇಕು, ಇದಕ್ಕೆ ನಿಯಮವನ್ನು ಸಿದ್ಧಪಡಿಸಬೇಕೆಂದು ಸಿಎಂ, ವೇದಿಕೆಯಲ್ಲಿ ಆಸಿನರಾಗಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರಿಗೆ ಸೂಚನೆ ನೀಡಿದರು.3 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ.