ಸಾರಾಂಶ
ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.ದೇಶದ ನಾಗರಿಕರ ರಕ್ಷಣೆಗಾಗಿ ಹಗಲಿರುಳೆನ್ನದೆ ಕರ್ತವ್ಯಪ್ರಜ್ಞೆಯಿಂದ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ಶುಭವನ್ನು ಹಾರೈಸುತ್ತಾ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾರಾಯಣ ಭಟ್ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ದೀಪ ಬೆಳಗಿ ಯೋಧರಿಗಾಗಿ ಪ್ರಾರ್ಥಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್, ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು, ಹೆತ್ತವರು, ಬೋಧಕ - ಬೋಧಕೇತರ ವೃಂದ, ವಿವಿಧ ವಿದ್ಯಾಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ - ವಿದ್ಯಾರ್ಥಿನಿಯರು, ಮಾಜಿ ಸೈನಿಕರು ದೀಪ ಬೆಳಗಿ ಯೋಧ ನಮನ ಸಲ್ಲಿಸಿದರು. ಪ್ರತಿಯೊಬ್ಬರೂ ತಾವು ಹಣತೆ ತಂದು ಅಮರ್ ಜವಾನ್ ಜ್ಯೋತಿ ಸ್ಮಾರಕದೆದುರು ಉರಿಸಿ ನಮಿಸಿದರು.ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಪುತ್ತೂರಿನ ಮಾಜಿ ಸೈನಿಕರ ಸಂಘದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಹಣತೆ ಬೆಳಗುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.