ಸಾರಾಂಶ
ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಭವಿಸಿದ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿರುವುದು.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.ಕೋರಮಂಗಲ ಸಮೀಪದ ವೆಂಕಟಾಪುರದ ನಿವಾಸಿ ಲೋಕೇಶ್ (41) ಮೃತ ದುರ್ದೈವಿ. ಕೃತ್ಯ ಎಸಗಿ ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆಗೆ ತನಿಖೆ ನಡೆದಿದೆ. ಯಲಹಂಕದಲ್ಲಿ ತನ್ನ ಸಂಬಂಧಿಕರ ಮನೆಗೆ ಭೇಟಿ ಲೋಕೇಶ್ ಮನೆಗೆ ಮರಳುವಾಗ ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಮೃತ ಲೋಕೇಶ್ ಕುಟುಂಬದ ಜತೆ ನಗರದಲ್ಲಿ ವಾಸವಾಗಿದ್ದರು. ಸ್ವಂತ ಉದ್ದಿಮೆ ನಡೆಸುತ್ತಿದ್ದ ಅವರು, ಯಲಹಂಕದಲ್ಲಿದ್ದ ಸಂಬಂಧಿಕರ ಮನೆಗೆ ಬುಧವಾರ ಹೋಗಿದ್ದರು. ಅಲ್ಲಿಂದ ಮನೆಗೆ ಮರಳುವಾಗ ರಾತ್ರಿ 9.45ರ ಸುಮಾರಿಗೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ಅವರ ಬೈಕ್‌ಗೆ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡು ಲೋಕೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.ಪ್ರಾಥಮಿಕ ಹಂತದಲ್ಲಿ ತನಿಖೆಯಲ್ಲಿ ಹಿಟ್ ಆ್ಯಂಡ್ ರನ್ ಎಸಗಿದ್ದು ಟೆಂಪೋ ಎಂಬುದು ಗೊತ್ತಾಗಿದೆ. ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿ ಪತ್ತೆಗೆ ತನಿಖೆ ನಡೆದಿದೆ. ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.