24ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

| Published : Feb 16 2024, 01:48 AM IST

24ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ ನೀಡಿ, 25000ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ಫ್ರೀಡಂ ಪಾರ್ಕ್‍ನಲ್ಲಿ ಫೆ.24ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ 25000ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಮಧ್ಯಾಹ್ನದ ಊಟ, ಕುಡಿವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಯಾವುದೇ ನ್ಯೂನತೆಗಳುಂಟಾಗದಂತೆ ವಿಶೇಷ ಗಮನಹರಿಸಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗುವುದು. ಅಲ್ಲದೇ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮ ಪಂಚಾಯಿತಿಗಳಿಂದ ಜನರನ್ನು ಕರೆತರಲು ಹಾಗೂ ಅವರ ಸ್ಥಳಕ್ಕೆ ಬಿಟ್ಟು ಬರಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಿರುವವ ಅನುಕೂಲಕ್ಕಾಗಿ ಸ್ಥಳದಲ್ಲಿಯೇ ಹೆಸರನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುವಂತೆ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಹಲವು ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಲು ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖಾ ಸೌಲಭ್ಯ ಪಡೆದ ಫಲಾನುಭವಿಗಳು ಆಹ್ವಾನಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು. ಕಾರ್ಯಕ್ರಮದ ಯಶಸ್ವಿಯಾಗುವ ನಿಟ್ಟಿನಲ್ಲಿ ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಕ್ರಮವಹಿಸಲಾಗುವುದು. ಅಲ್ಲದೇ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿ ಸರ್ಕಾರದ ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರು, ವಿಧಾನಪರಿಷತ್ ಮತ್ತು ವಿಧಾನಸಭಾ ಶಾಸಕರು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್‍ಕುಮಾರ್ ಭೂಮರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ ಮತ್ತಿತರರು ಇದ್ದರು.