ರಾಮನಗರ: ರಾಜ್ಯಸರ್ಕಾರ ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ ಜೆಡಿಎಸ್ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೂ.21ರಂದು ನಮ್ಮ ಭೂಮಿ-ನಮ್ಮ ಹಕ್ಕು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ, ಮಾಜಿ ಶಾಸಕ ಎ.ಮಂಜುನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿರವರು ಮಾರ್ಗದರ್ಶನದಂತೆ ಎರಡು ಹಂತದಲ್ಲಿ ಪಾದಯಾತ್ರೆ ನಡೆಯಲಿದೆ. ಮೊದಲ ಹಂತದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರು ನೇತೃತ್ವದಲ್ಲಿ ಟೌನ್ ಶಿಪ್ ಯೋಜನೆ ವ್ಯಾಪ್ತಿಯ 10 ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ ಎಂದರು.ಈ ಬೃಹತ್ ಪಾದಯಾತ್ರೆಯು ಅಂಚಿಪುರ, ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ, ಹೊಸೂರು ಗ್ರಾಮಗಳ ಪ್ರಮುಖ ಬೀದಿಗಳ ಮೂಲಕ ಗ್ರಾಮದಿಂದ ಗ್ರಾಮಕ್ಕೆ ಸುಮಾರು 11 ಕಿಲೋ ಮೀಟರ್ ವರೆಗೆ ಸಾಗಲಿದೆ. ಹಾಲಿ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸುವರು. ಅಲ್ಲದೆ, ಈ ಭಾಗದ ರೈತರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಸಹಸ್ರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವರು. ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತ ಪಡಿಸಿವೆ ಎಂದು ಹೇಳಿದರು.
ರೈತರಿಗೆ ಆತ್ಮಸ್ಥೈರ್ಯ ತುಂಬಲು ಪ್ರತಿ ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ. ರೈತರ ಮನೆ ಬಾಗಿಲಿಗೆ ಹೋಗಿ ಆತ್ಮಸ್ಥೈರ್ಯ ತುಂಬುವ ಜೊತೆಗೆ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ. ಈ ಯೋಜನೆ ವಿರುದ್ಧ ಕಾನೂನು ಹೋರಾಟದ ಬಗ್ಗೆಯೂ ರೈತರಲ್ಲಿ ಅರಿವು ಮೂಡಿಸುತ್ತೇವೆ ಎಂದು ತಿಳಿಸಿದರು.ಈಗ ಅಂತಿಮ ಅಧಿಸೂಚನೆ ಹೊರಡಿಸಿರುವ ಮೂರು ಗ್ರಾಮಗಳ ರೈತರು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅವರಿಗೆ ಕಾನೂನಾತ್ಮಕವಾಗಿ ಹೋರಾಟ ಮಾಡುವ ಧೈರ್ಯ ತುಂಬುತ್ತೇವೆ. ಈ ಹೋರಾಟವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ರೈತರ ಭೂಮಿ ಕಸಿದುಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎ.ಮಂಜುನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ, ಬಿಡದಿ ಸೊಸೈಟಿ ಮಾಜಿ ನಿರ್ದೇಶಕ ನರಸಿಂಹಯ್ಯ, ಮುಖಂಡರಾದ ರಾಮು, ಬಸವರಾಜಪ್ಪ, ಮಂಜಣ್ಣ, ಮಹದೇವಯ್ಯ, ಸಂಪತ್ ಕುಮಾರ್, ನರಸಿಂಹಮೂರ್ತಿ, ಚೇತನ್ ಮತ್ತಿತರರು ಉಪಸ್ಥಿತರಿದ್ದರು.
19ಕೆಆರ್ ಎಂಎನ್ 2.ಜೆಪಿಜಿ
ರಾಮನಗರದಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.