ಬೈಕ್‌ ಅಣಕು ಅಂತ್ಯಕ್ರಿಯೆ ನಡೆಸಿ ಆಕ್ರೋಶ

| Published : Jun 19 2024, 01:12 AM IST

ಸಾರಾಂಶ

ರಾಜ್ಯ ಸರ್ಕಾರ ತೈಲ ದರ ಏರಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದಿಂದ (ಆಪ್‌) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ವಿನೂತನ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯ ಸರ್ಕಾರ ತೈಲ ದರ ಏರಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದಿಂದ (ಆಪ್‌) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ವಿನೂತನ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣಕು ಅಂತ್ಯಕ್ರಿಯೆ ನಡೆಸುವ ಮುಖಾಂತರ ಗಮನ ಸೆಳೆದರು. ಬಳಿಕ ಸೈಕಲ್‌ ಸವಾರಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಒಂದು ವರ್ಷದ ಅವಧಿಯೊಳಗೆ ಮೂರು ಬಾರಿ ಅಬಕಾರಿ ತೆರಿಗೆ ಹೆಚ್ಚಿಸಿದೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ ಶೇ.25ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಈಗ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಮೂಲಗಳನ್ನು ಹುಡುಕುತ್ತಿದ್ದಾರೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ 52 ಸಾವಿರ ಕೋಟಿ ರು. ಒದಗಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒದ್ದಾಡುತ್ತಿದ್ದಾರೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್‌ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್‌ ಸೆಹ್ವಾನಿ, ರಾಜ್ಯ ಖಜಾಂಚಿ ಪ್ರಕಾಶ್‌ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್‌ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.