ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಧೂಮಪಾನ ನಿಷೇಧಕ್ಕೆ ಕ್ರಮ

| Published : Dec 20 2023, 01:15 AM IST

ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಧೂಮಪಾನ ನಿಷೇಧಕ್ಕೆ ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸುವ ಸಲುವಾಗಿ ಸೂಕ್ತ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಬಕಾರಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸುವ ಸಲುವಾಗಿ ಸೂಕ್ತ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಬಕಾರಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದೇಶಿ ಸಿಗರೇಟ್‌ಗಳ ಮಾರಾಟದ ಬಗ್ಗೆ ಕ್ರಮಕೈಗೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಎಲ್‌ಇಡಿ ವಾಲ್ ಹಾಗೂ ಸಿಗ್ನಲ್‌ಗಳಲ್ಲಿ ತಂಬಾಕು ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ನಿಯಮಗಳ ಬಗ್ಗೆ ಪ್ರಚಾರ ಮಾಡಬೇಕು ಎಂದರಲ್ಲದೆ, ಪಾಲಿಕೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಪರವಾನಗಿ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸುವಲ್ಲಿ ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡುತ್ತಿವೆ. ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ, ಅಗ್ನಿಶಾಮಕದಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೂ ಸಹ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲು ಅಧಿಕಾರವಿದ್ದು, ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತರಾಗಿ ತಂಬಾಕು ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಸರ್ವೇಲೆನ್ಸ್ ಕಾರ್ಯಕ್ರಮಾಧಿಕಾರಿ ಡಾ. ರಾಮೇಗೌಡ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 100 ಶಾಲಾ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲು ಗುರಿ ಹೊಂದಲಾಗಿತ್ತು. ಈ ಪೈಕಿ ಈಗಾಗಲೇ ಶಾಲೆಗಳಲ್ಲಿ ೮೪ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ತಂಬಾಕು ಉತ್ಪನ್ನಗಳನ್ನು ಬಳಸುವುದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗಿದೆ. ತಂಬಾಕು ಮುಕ್ತ ಶಾಲಾ ಆವರಣವನ್ನು ನಿರ್ಮಿಸುವಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆ ರಾಜ್ಯದಲ್ಲಿಯೇ ಮೊದಲಸ್ಥಾನ ಪಡೆದುಕೊಂಡಿದೆ ಎಂದು ಸಭೆಗೆ ತಿಳಿಸಿದರು.

ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ್ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಯಡಿ 2023 ರ ಏಪ್ರಿಲ್ ಮಾಹೆಯಿಂದ ನವೆಂಬರ್‌ವರೆಗೆ ಆರೋಗ್ಯ ಇಲಾಖೆಯು 139 ಕಾರ್ಯಾಚರಣೆ ನಡೆಸಿ 1528 ಪ್ರಕರಣಗಳನ್ನು ದಾಖಲಿಸಿಕೊಂಡು 1,55,095 ರು. ದಂಡ, ಪೊಲೀಸ್ ಇಲಾಖೆಯು 907 ಪ್ರಕರಣಗಳನ್ನು ದಾಖಲಿಸಿಕೊಂಡು 1,08,850 ರು. ದಂಡ ಹಾಗೂ ಕೆಎಸ್‌ಆರ್‌ಟಿಸಿ ವತಿಯಿಂದ 62 ಪ್ರಕರಣ ದಾಖಲಿಸಿಕೊಂಡು 12,400 ರು. ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್, ಅಬಕಾರಿ ನಿರೀಕ್ಷಕ ನವೀನ್, ಪಾಲಿಕೆ ಆರೋಗ್ಯಾಧಿಕಾರಿ ಮದಕರಿ ನಾಯಕ, ತುಮಕೂರು ಡಿವೈಪಿಸಿ ರಂಗಧಾಮಪ್ಪ, ಮಧುಗಿರಿ ಡಿವೈಪಿಸಿ ಪುಷ್ಪವಲ್ಲಿ, ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಗಂಗಾಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಂಜಿನಪ್ಪ, ವಿವಿಧ ತಾಲೂಕಿನ ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.ಫೋಟೊನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿದರು.