ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ

| Published : Jan 08 2025, 12:18 AM IST

ಸಾರಾಂಶ

ಜಿಲ್ಲಾಡಳಿತದಿಂದ ಜ. 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಹಾವೇರಿ: ಜಿಲ್ಲಾಡಳಿತದಿಂದ ಜ. 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಸರ್ಕಾರಿ ಕಚೇರಿಗಳು, ನಗರದ ವೃತ್ತಗಳಿಗೆ ದೀಪಾಲಂಕಾರ, ಸನ್ಮಾನಿತರಿಗೆ, ಮಾಧ್ಯಮದವರಿಗೆ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು ಎಂದರು.ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ವೇದಿಕೆ ಸಿದ್ಧತೆ ಒಳಗೊಂಡಂತೆ ಗಣರಾಜ್ಯೋತ್ಸವದ ವಿವಿಧ ಸಿದ್ಧತೆಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವಂತೆ ಸಲಹೆ ನೀಡಿದರು. ಕ್ರೀಡೆ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಉಪವಿಭಾಗಾಧಿಕಾರಿ ಚೆನ್ನಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾಧಿಕಾರಿ ಮಮತಾ ಹೊಸಗೌಡ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಅಬಕಾರಿ ಇಲಾಖೆ ಉಪ ಆಯುಕ್ತರಾದ ಶೈಲಜಾ, ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ತಹಸೀಲ್ದಾರ ಶರಣಮ್ಮ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.