ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಕುಡಿಯುವ ನೀರು ಕೊರತೆಯಾಗದ ರೀತಿಯಲ್ಲಿ ಖಾಸಗಿ ಕೊಳವೆಬಾವಿಗಳ ಮಾಲೀಕರೊಂದಿಗೆ ಮುಂಚಿತವಾಗಿಯೇ ಒಪ್ಪಂದ ಮಾಡಿಕೊಳ್ಳಬೇಕು. ಪ್ರತಿ ಪಂಚಾಯಿತಿ ಮಟ್ಟದಲ್ಲಿ ಒಂದು ಸಮಿತಿ ರಚಿಸಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು.ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಇಲಾಖೆಯ ಬೆಳಗಾವಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬರ ಸಂದರ್ಭದಲ್ಲಿ ಟ್ಯಾಂಕರ್ ಹಾಗೂ ಕೊಳವೆಬಾವಿ ಬಾಡಿಗೆಯನ್ನು ಎಸ್.ಡಿ.ಆರ್.ಎಫ್. ಅನುದಾನದಲ್ಲಿ ಪಾವತಿಸಬಹುದು ಎಂದು ಸಲಹೆ ನೀಡಿದರು.
ಜಿಲ್ಲೆಯ 3.43 ಲಕ್ಷ ರೈತರಿಗೆ ₹ 63.84 ಕೋಟಿ ಬೆಳೆಹಾನಿ ಪರಿಹಾರ ನೀಡಲಾಗಿದೆ. ಪರಿಹಾರ ವಿತರಣೆಯ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯಿತಿಗಳ ನೋಟಿಸ್ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಬೆಳಗಾವಿ ಜಿಲ್ಲೆಯ 3.43 ಲಕ್ಷ ರೈತರಿಗೆ ಈಗಾಗಲೇ ಬೆಳೆಹಾನಿ ಪರಿಹಾರ ನೀಡಲಾಗಿದೆ. ಉಳಿದವರಿಗೆ ಇನ್ನೊಂದು ವಾರದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಭೂ ಕಂದಾಯ ಹಾಗೂ ರಾಜಸ್ವವನ್ನು ಸಮರ್ಪಕವಾಗಿ ವಸೂಲಿ ಮಾಡಲು ಕ್ರಮ ಕೈಗೊಳ್ಳಬೇಕು. ರಾಜಸ್ವ ವಂಚಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಬಿಸಿ ಮುಟ್ಟಿಸಬೇಕು ಎಂದು ಸೂಚನೆ ನೀಡಿದರು.ಸಾರ್ವಜನಿಕ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಲು ಅನುಕೂಲವಾಗುವಂತೆ ಎಲ್ಲ ತಹಸೀಲ್ದಾರ ಕಚೇರಿಗಳಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಬಲಪಡಿಸಬೇಕು. ಕಡತಗಳ ವಿಲೇವಾರಿ ಚುರುಕುಗೊಳಿಸಲು ಟಪಾಲು ಸೇರಿದಂತೆ ಎಲ್ಲ ವಿಭಾಗದ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಬೇಕು ಎಂದು ಸಚಿವರು ತಿಳಿಸಿದರು.
ಕಾಗವಾಡ ತಾಲೂಕು ಹೊಸದಾಗಿ ರಚನೆಯಾಗಿದ್ದು, ಮೂಲಸೌಕರ್ಯಗಳನ್ನು ಒದಗಿಸಲು ಅನುದಾನ ಬಿಡುಗಡೆ ಮಾಡಬೇಕು ಎಂದು ಕಾಗವಾಡ ಶಾಸಕ ರಾಜು ಕಾಗೆ ಒತ್ತಾಯಿಸಿದರು. ಅಧಿಕಾರಿಗಳು, ಸಿಬ್ಬಂದಿ ಕೊರತೆಯಿದೆ. ಬಹುತೇಕ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಾಗೆ ಅವರು ಮನವಿ ಮಾಡಿದರು. ಆದಷ್ಟು ಬೇಗ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, 15 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಘಟಪ್ರಭಾ ಜಲಾಶಯದಲ್ಲಿ ಶೇ.66.11, ಮಾರ್ಕಂಡೇಯ ಶೇ.68.15, ಮಲಪ್ರಭಾ ಜಲಾಶಯ ಶೇ.36.90 ರಷ್ಟು ನೀರು ಲಭ್ಯವಿದೆ ಎಂದು ತಿಳಿಸಿದರು. ಮೇವು ಖರೀದಿಗಾಗಿ ಟೆಂಡರ್ ಕರೆಯಲಾಗಿದ್ದು, ಅಗತ್ಯ ಮೇವು ಸಂಗ್ರಹಣೆಗೆ ಕ್ರಮ ವಹಿಸಲಾಗುವುದು. 17931 ಮೇವಿನ ಕಿಟ್ ಗಳನ್ನು ವಿತರಿಸಲಾಗಿದೆ. ಕುಡಿಯುವ ನೀರು ಸಮಸ್ಯೆಕಂಡುಬಂದಲ್ಲಿ 24 ಗಂಟೆಯಲ್ಲಿ ಪರಿಹರಿಸುವಂತೆ ಸೂಚನೆ ನೀಡಲಾಗಿದೆ. ತಹಶೀಲ್ದಾರರ ಖಾತೆಯಲ್ಲಿ ₹17 ಕೋಟಿ ಹಣ ಲಭ್ಯವಿದೆ. ಬರ ನಿರ್ವಹಣೆಗೆ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು ಕೊರತೆಯಾಗಬಹುದಾದ ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ತುರ್ತು ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಖಾಸಗಿ ಕೊಳವೆಬಾವಿಗಳನ್ನು ಕೂಡ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲೆಯಲ್ಲಿ ಮಾರ್ಚ್ ತಿಂಗಳವರೆಗೆ ಕುಡಿಯುವ ನೀರಿನ ಕೊರತೆ ಕಂಡುಬರುವುದಿಲ್ಲ ಎಂದು ತಿಳಿಸಿದರು.